ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ರಾಜ್ಘಾಟ್ನಲ್ಲಿ ಕಾಂಗ್ರೆಸ್ ಸತ್ಯಾಗ್ರಹ, ಖರ್ಗೆ, ಪ್ರಿಯಾಂಕಾ ಗಾಂಧಿ ಭಾಗಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ರಾಜ್ಘಾಟ್ನಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಸತ್ಯಾಗ್ರಹ ಆರಂಭಿಸಿದ್ದು, ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.
Published: 26th March 2023 12:57 PM | Last Updated: 26th March 2023 12:57 PM | A+A A-

ಸತ್ಯಾಗ್ರಹ ನಡೆಸುತ್ತಿರುವ ಕಾಂಗ್ರೆಸ್ ನಾಯಕರು.
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ರಾಜ್ಘಾಟ್ನಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಸತ್ಯಾಗ್ರಹ ಆರಂಭಿಸಿದ್ದು, ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.
ಸತ್ಯಾಗ್ರಹಕ್ಕೆ ಈಗಾಗಲೇ ದೆಹಲಿ ಪೊಲೀಸರು ಅನುಮದಿ ನಿರಾಕರಿಸಿದ್ದು, ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಆದರೂ, ಪಟ್ಟು ಬಿಡದ ಕಾಂಗ್ರೆಸ್ ನಾಯಕರು ಸತ್ಯಾಗ್ರಹ ನಡೆಸುತ್ತಿದ್ದಾರೆ.
ರಾಜ್ಘಾಟ್ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಬಿಜೆಪಿ ರಾಹುಲ್ ಗಾಂಧಿಗೆ ಮಾತನಾಡಲು ಬಿಡುತ್ತಿಲ್ಲ. ರಾಹುಲ್ ಗಾಂಧಿ ಅವರು ರಾಷ್ಟ್ರಕ್ಕಾಗಿ ಮತ್ತು ಸಾರ್ವಜನಿಕರ ಹಕ್ಕಿಗಾಗಿ ಹೋರಾಡುತ್ತಿದ್ದಾರೆ ಇಂದು ನಾವು ಗಾಂಧಿ ಸ್ಮಾರಕಕ್ಕೆ ಹೋಗುತ್ತೇವೆ ಮತ್ತು ಅಲ್ಲಿ ಸತ್ಯಾಗ್ರಹ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.
ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.
ನಪ್ರತಿನಿಧಿಗಳ ಕಾಯ್ದೆಯಂತೆ ಶಾಸಕರು/ ಸಂಸದರು ಎರಡು ನಿದರ್ಶನಗಳಲ್ಲಿ ತಮ್ಮ ಸ್ಥಾನದಿಂದ ಅನರ್ಹರಾಗಬಹುದು. ಮೊದಲು ಸೆಕ್ಷನ್ 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ ಮತ್ತು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಥವಾ ಸೆಕ್ಷನ್ 171E (ಲಂಚ ತೆಗೆದುಕೊಳ್ಳುವುದು)ನಂತಹ ಪ್ರಕರಣ ಅಥವಾ ಸೆಕ್ಷನ್ 171F (ಚುನಾವಣೆಯಲ್ಲಿ ಅನಗತ್ಯ ಪ್ರಭಾವದ) ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾದರೆ ತಮ್ಮ ಸ್ಥಾನವನ್ನು ಸಂಸದರು ಕಳೆದುಕೊಳ್ಳಲಿದ್ದಾರೆ.