ಪಶ್ಚಿಮ ಬಂಗಾಳ: ಹೌರಾದಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ, ವಾಹನಗಳಿಗೆ ಬೆಂಕಿ!
ಹೌರಾ: ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ಗುರುವಾರ ಸಂಜೆ ರಾಮನವಮಿ ಮೆರವಣಿಗೆ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾಚಾರ ಸಂಭವಿಸಿದ್ದು,ಹಲವು ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.ಈ ಸಂಬಂಧ ಅನೇಕ ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಾಜಿಪಾರಾ ಪ್ರದೇಶದ ಮೂಲಕ ಮೆರವಣಿಗೆ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಿಂಸಾಚಾರದ ಸಂದರ್ಭದಲ್ಲಿ ಹಲವಾರು ಅಂಗಡಿಗಳು ಮತ್ತು ಆಟೋ- ರಿಕ್ಷಾಗಳನ್ನು ಸುಟ್ಟು ಹಾಕಲಾಗಿದೆ ಮತ್ತು ಕೆಲವು ಪೊಲೀಸ್ ವಾಹನಗಳು ಸೇರಿದಂತೆ ಹಲವಾರು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ರಾಮನವಮಿ ಮೆರವಣಿಗೆಯಲ್ಲಿ ಕೋಮು ಘರ್ಷಣೆ ಉಂಟುಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ