ಇಂದೋರ್: ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ ಪ್ರಕರಣ; ಮೃತರ ಸಂಖ್ಯೆ 35ಕ್ಕೆ ಏರಿಕೆ

ರಾಮನವಮಿ ಆಚರಿಸುತ್ತಿದ್ದ ವೇಳೆ ಇಂದೋರ್'ನ ದೇವಸ್ಥಾನವೊಂದರ ಮೆಟ್ಟಿಲು ಬಾವಿ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವುದು.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವುದು.

ಇಂದೋರ್: ರಾಮನವಮಿ ಆಚರಿಸುತ್ತಿದ್ದ ವೇಳೆ ಇಂದೋರ್'ನ ದೇವಸ್ಥಾನವೊಂದರ ಮೆಟ್ಟಿಲು ಬಾವಿ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ರಾಮನವಮಿ ನಿಮಿತ್ತ ಇಂದೋರ್'ನ ಬೇಲೇಶ್ವರ ದೇವಸ್ಥಾನದಲ್ಲಿ ಹೋಮ ಹವನ ಏರ್ಪಡಿಸಲಾಗಿತ್ತು. ಇದರಲ್ಲಿ ಪಾಲ್ಗೊಳ್ಳಲು ಭಾರೀ ಸಂಖ್ಯೆಯಲ್ಲಿ ಜನ ಬಂದು ನೂಕು ನುಗ್ಗಲು ಏರ್ಪಟ್ಟಿತ್ತು. ಈ ವೇಳೆ ದೇಗುಲದ ಬಾವಿ ಬಳಿಯ ಭೂಮಿ ಕುಸಿದಿದ್ದು, ಇದರ ಪರಿಣಾಮ ಅಲ್ಲೇ ಇದ್ದ ಬಾವಿಯ ಕಬ್ಬಿಣದ ಸರಳಿನ ಮೇಲ್ಛಾವಣಿಯೂ ಕುಸಿದು ಬಿದ್ದಿತ್ತು. ಈ ವೇಳೆ ಸ್ಥಳದಲ್ಲಿದ್ದ ಹಲವು ಮಂದಿ ಭಕ್ತರು ಬಾವಿಗೆ ಬಿದ್ದಿದ್ದರು.

ಸುದ್ದಿ ತಿಳಿಯುತ್ತಿದ್ದಂತೆಯ ಸ್ಥಳಕ್ಕಾಗಮಿಸಿದ ರಕ್ಷಣಾ ಸಿಬ್ಬಂದಿ ಈ ವರೆಗೂ 19 ಮಂದಿಯನ್ನು ರಕ್ಷಣೆ ಮಾಡಿದ್ದು, 26 ಮೃತದೇಹಗಳನ್ನು ಹೊರತೆಗೆದಿದ್ದಾರೆ. 14 ಮಂದಿಯ ಗಾಯಾಳುಗಳ ಪೈಕಿ 7 ಮಂದಿ ಸಾವನ್ನಪ್ಪಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ, ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಬಾವಿಯಿಂದ ಹೊರ ತೆಗೆದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ನಾಪತ್ತೆಯಾಗಿರುವ ಭಕ್ತರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ. ದೇವಸ್ಥಾನದ ಆವರಣದಲ್ಲಿದ್ದ ಜನದಟ್ಟಣೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಬಾವಿಯ ನೀರಿನಲ್ಲಿ ಮತ್ತಷ್ಟು ದೇಹಗಳು ಸಿಲುಕಿರುವ ಶಂಕೆಗಳಿದ್ದು, ಇದೀಗ ಬಾವಿಯಿಂದ ನೀರನ್ನು ಹೊರಗೆ ಬಿಡಲಾಗುತ್ತಿದೆ. ವಿಶೇಷ ಉಪಕರಣಗಳ ಬಳಸಿಕೊಂಡು  ಜನರನ್ನು ಹಗ್ಗಗಳಿಂದ ಮೇಲಕ್ಕೆತ್ತವ ಕೆಲಸ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆಯವರೆಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು, ರಕ್ಷಣಾ ಕಾರ್ಯಾಚರಣೆ ಕುರಿತು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ, ಅವರ ಶಾಸಕ ಪುತ್ರ ಆಕಾಶ್ ವಿಜಯವರ್ಗಿಯಾ, ಕಾಂಗ್ರೆಸ್ ಶಾಸಕ ಜಿತು ಪಟ್ವಾರಿ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ ಪತ್ರಕರ್ತರಿಗೆ ಮಾಹಿತಿ ನೀಡಿದ ಕೈಲಾಶ್ ವಿಜಯವರ್ಗಿಯಾ ಅವರು, "ಬಾವಿಯೊಳಗೆ ಆಮ್ಲಜನಕದ ಬೆಂಬಲ ಮತ್ತು ದೀಪಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣವನ್ನು ಮಧ್ಯಪ್ರದೇಶ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆ ಆದೇಶಿಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ಘೋಷಿಸಿದೆ.

ಏತನ್ಮಧ್ಯೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘಟನೆಯ ಬಗ್ಗೆ ತೀವ್ಸ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

"ಇಂಧೋರ್‌ನಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಸಿಎಂ ಶಿವರಾಜ್ ಚೌಹಾಣ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ರಾಜ್ಯ ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಡೆಸುತ್ತಿದೆ. ಎಲ್ಲಾ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com