ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸೇನೆ ನಿಯೋಜನೆ; ಸುರಕ್ಷಿತ ಸ್ಥಳಗಳಿಗೆ 7,500 ಜನರ ಸ್ಥಳಾಂತರ

ಮಣಿಪುರದಲ್ಲಿ ಬುಡಕಟ್ಟು ಜನಾಂಗದವರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ.
ಮಣಿಪುರದಲ್ಲಿ ಸೇನೆ ನಿಯೋಜನೆ
ಮಣಿಪುರದಲ್ಲಿ ಸೇನೆ ನಿಯೋಜನೆ

ಇಂಫಾಲ: ಮಣಿಪುರದಲ್ಲಿ ಬುಡಕಟ್ಟು ಜನಾಂಗದವರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ.

ಇದುವರೆಗೆ 7,500 ಜನರನ್ನು ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಪಡೆಗಳು ರಕ್ಷಿಸಿದ್ದು, ಆಶ್ರಯ ನೀಡಿವೆ. ಹೆಚ್ಚಿನ ಜನರನ್ನು ಅಲ್ಲಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಕಳೆದ ರಾತ್ರಿ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಮನವಿ ಮಾಡಲಾಗಿತ್ತು. ಬಳಿಕ ರಾಜ್ಯ ಪೊಲೀಸರೊಂದಿಗೆ ಪಡೆಗಳನ್ನು ಬೆಳಿಗ್ಗೆ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಧ್ವಜ ಮೆರವಣಿಗೆ ನಡೆಸಲಾಗುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ರಾಜ್ಯದ ಜನಸಂಖ್ಯೆಯ ಶೇ 53ರಷ್ಟಿರುವ ಬುಡಕಟ್ಟು ಜನಾಂಗದವರಲ್ಲದ ಮೇಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟಿಸಲು ಅಖಿಲ ಬುಡಕಟ್ಟು ವಿದ್ಯಾರ್ಥಿ ಸಂಘ ಮಣಿಪುರ (ಎಟಿಎಸ್‌ಯುಎಂ) ಬುಧವಾರ ರಾಜ್ಯದ ಹತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿತ್ತು. 

ಮೇಟಿ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸಬೇಕೆಂಬ ಬೇಡಿಕೆಯ ಕುರಿತು ನಾಲ್ಕು ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಸೂಚಿಸಿದ ನಂತರ ಈ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.

ಚುರಾಚಂದ್‌ಪುರ ಜಿಲ್ಲೆಯ ಟೊರ್ಬಂಗ್ ಪ್ರದೇಶದಲ್ಲಿ ನಡೆದ ಮೆರವಣಿಗೆ ವೇಳೆ ಶಸ್ತ್ರಸಜ್ಜಿತ ಗುಂಪೊಂದು ಮೇಟಿ ಸಮುದಾಯದ ಜನರ ಮೇಲೆ ಏಕಾಏಕಿ ದಾಳಿ ನಡೆಸಿತು. ಇದು ಕಣಿವೆ ಜಿಲ್ಲೆಗಳಲ್ಲಿ ಪ್ರತೀಕಾರದ ದಾಳಿಗೆ ಕಾರಣವಾಯಿತು. ಇದು ರಾಜ್ಯದಾದ್ಯಂತ ಹಿಂಸಾಚಾರವನ್ನು ಹೆಚ್ಚಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಟೊರ್ಬಂಗ್‌ನಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಹಿಂಸಾಚಾರದಲ್ಲಿ ಹಲವಾರು ಅಂಗಡಿಗಳು ಮತ್ತು ಮನೆಗಳನ್ನು ಧ್ವಂಸಗೊಳಿಸಲಾಯಿತು ಮತ್ತು ಸುಟ್ಟುಹಾಕಲಾಯಿತು ಎಂದು ಅವರು ಹೇಳಿದರು.

ಶಾಂತಿ ಕಾಪಾಡುವಂತೆ ಜನರನ್ನು ಒತ್ತಾಯಿಸಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, 'ಅಮೂಲ್ಯವಾದ ಜೀವಗಳನ್ನು ಕಳೆದುಕೊಂಡಿದ್ದೇವೆ. ಆಸ್ತಿಪಾಸ್ತಿ ಹಾನಿಯಾಗಿದೆ. ಇದು ಅತ್ಯಂತ ದುರದೃಷ್ಟಕರ. ಆದರೆ, ಸಾವಿನ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ. ಹಿಂಸಾಚಾರವು ಸಮಾಜದಲ್ಲಿನ ತಪ್ಪು ತಿಳುವಳಿಕೆಯ ಪರಿಣಾಮವಾಗಿದೆ' ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರ ಜೀವ ಮತ್ತು ಆಸ್ತಿ ರಕ್ಷಣೆಗೆ ಹೆಚ್ಚುವರಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.ಹಿಂಸಾಚಾರದಲ್ಲಿ ತೊಡಗುವ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಪಡೆಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ನೆರೆಯ ಮಿಜೋರಾಂನ ಮುಖ್ಯಮಂತ್ರಿ ಝೋರಂತಂಗ ಅವರು ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com