2024 ಲೋಕಸಭಾ ಚುನಾವಣೆ: ವಿಪಕ್ಷಗಳ ಒಕ್ಕೂಟ ರಚನೆಗೆ ಕಸರತ್ತು; ಖರ್ಗೆ, ರಾಹುಲ್ ಭೇಟಿಯಾದ ನಿತೀಶ್!

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಪ್ರತಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನ ನಡೆಯುತ್ತಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ.
ಖರ್ಗೆ, ರಾಹುಲ್, ನಿತೀಶ್ ಕುಮಾರ್
ಖರ್ಗೆ, ರಾಹುಲ್, ನಿತೀಶ್ ಕುಮಾರ್

ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಪ್ರತಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನ ನಡೆಯುತ್ತಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳಲ್ಲಿ ನಡೆದ ಎರಡನೇ ಸಭೆ ಇದಾಗಿದೆ. 

10 ರಾಜಾಜಿ ಮಾರ್ಗ್ ನಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ಹಿರಿಯ ನಾಯಕರ ಸಮಾಗಮ ನಡೆಯಿತು. ಸಭೆಯಲ್ಲಿ ಪ್ರತಿಪಕ್ಷಗಳ ಒಗ್ಗಟ್ಟು ಬಲಪಡಿಸುವ ಮಾರ್ಗಸೂಚಿ ಮತ್ತು ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಂಭವನೀಯ ಸಭೆಯ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ಮಾರನೇ ದಿನ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಜೆಡಿಯು ಮುಖ್ಯಸ್ಥ ಲಾಲನ್ ಸಿಂಗ್ ಸಭೆಯಲ್ಲಿ ಉಪಸ್ಥಿತರಿದ್ದರು. 

ಭಾನುವಾರ ಕೇಜ್ರಿವಾಲ್ ಭೇಟಿಯಾಗಿದ್ದ ನಿತೀಶ್ ಕುಮಾರ್, ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದೊಂದಿಗೆ ನಡೆಯುತ್ತಿರುವ ಸಂಘರ್ಘದಲ್ಲಿ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದರು. ಶನಿವಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತೇಜಸ್ವಿ ಯಾದವ್, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಭಾಗವಹಿಸುವ ಮೂಲಕ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶಿಸಿದರು. 

ಪ್ರತಿಪಕ್ಷಗಳ ಒಕ್ಕೂಟ ಇನ್ನೂ ಸೂಕ್ತ ರೂಪ ತಾಳದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ವಿರೋಧ ಪಕ್ಷದ ನಾಯಕರು ಮತ್ತು ಪ್ರಾದೇಶಿಕ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ನಂತರ ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಭೆ ನಡೆಯಬಹುದು ಎಂದು ಕಳೆದ ತಿಂಗಳ ಕೊನೆಯಲ್ಲಿ ಕುಮಾರ್ ಸುಳಿವು ನೀಡಿದ್ದರು ಮತ್ತು ಆ ಸಭೆಯಲ್ಲಿ ವಿಪಕ್ಷಗಳ ಒಗ್ಗಟ್ಟಿನ ರಚನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com