ತೆಲಂಗಾಣ ಚುನಾವಣೆ: ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ವಿರುದ್ಧ ದೂರು ದಾಖಲು!

ಮತದಾನದ ದಿನದಂದು 'ಮತ ಕೇಳುವ' ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೆಲಂಗಾಣ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ವಿರುದ್ಧ ಗುರುವಾರ ದೂರು ದಾಖಲಿಸಿದ್ದಾರೆ.
ಬಿಆರ್‌ಎಸ್ ಎಂಎಲ್‌ಸಿ ಕವಿತಾ
ಬಿಆರ್‌ಎಸ್ ಎಂಎಲ್‌ಸಿ ಕವಿತಾ
Updated on

ಹೈದರಾಬಾದ್: ಮತದಾನದ ದಿನದಂದು 'ಮತ ಕೇಳುವ' ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೆಲಂಗಾಣ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ವಿರುದ್ಧ ಗುರುವಾರ ದೂರು ದಾಖಲಿಸಿದ್ದಾರೆ.

'ಬಿಆರ್‌ಎಸ್‌ಗೆ ಮತ ನೀಡುವಂತೆ ಮನವಿ ಮಾಡುವ ಮೂಲಕ ಕವಿತಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಇಂದು ಬಂಜಾರಾ ಹಿಲ್ಸ್‌ನ ಡಿಎವಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕವಿತಾ, ಬಿಆರ್‌ಎಸ್‌ಗೆ ಮತ ಹಾಕುವಂತೆ ಮನವಿ ಮಾಡಿದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ' ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಈ ಕುರಿತು ಕವಿತಾ ಅವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ಅವರ ಗಮನಕ್ಕೆ ತರಲಾಗಿದೆ ಎಂದರು.

ಇಂದು ನಡೆಯುತ್ತಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಗುರುವಾರ ಬೆಳಗ್ಗೆ ಕೆ ಕವಿತಾ ಅವರು ಮತ ಚಲಾಯಿಸಿದ್ದು, 'ನಗರದ ಮತದಾರರು' ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದರು.

'ವಿಶೇಷವಾಗಿ ಯುವಕ-ಯುವತಿಯರು, ದಯವಿಟ್ಟು ಬಂದು ಮತ ಚಲಾಯಿಸುವಂತೆ ನಾನು ಪ್ರಾಮಾಣಿಕವಾಗಿ ಮನವಿ ಮಾಡುತ್ತೇನೆ. ಇಂದು ರಜಾದಿನವಲ್ಲ; ಪ್ರಜಾಪ್ರಭುತ್ವದಲ್ಲಿ ಭಾಗವಹಿಸಲು ಮತ್ತು ಬಲಪಡಿಸಲು ಇದೊಂದು ವಿಶೇಷ ದಿನ' ಎಂದು ಕವಿತಾ ಮತಗಟ್ಟೆಯಿಂದ ಹೊರಬರುವಾಗ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದರು.

ಇಂದು ಮುಂಜಾನೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ತೆಲಂಗಾಣ ಜನತೆಗೆ ಮನವಿ ಮಾಡಿದರು.

2,290 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲು ಒಟ್ಟು 3.17 ಕೋಟಿ ಮತದಾರರು ಮತದಾನ ಮಾಡುತ್ತಿದ್ದಾರೆ. ರಾಜ್ಯದಾದ್ಯಂತ ಸ್ಥಾಪಿಸಲಾಗಿರುವ 35,655 ಮತಗಟ್ಟೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ತೆಲಂಗಾಣದಲ್ಲಿ ಮೊದಲ ಬಾರಿಗೆ 80 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಮತ್ತು ಅಂಗವಿಕಲ ವ್ಯಕ್ತಿಗಳಿಗೆ ಮನೆಯಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸುಮಾರು 27,600 ಮತದಾರರು ಗುರುವಾರ ಈ ಸೇವೆಯನ್ನು ಪಡೆಯಲು ಸೇರ್ಪಡೆಗೊಂಡಿದ್ದಾರೆ. ಸುಮಾರು 1,000 ಇತರ ಮತದಾರರು ಎಲೆಕ್ಟ್ರಾನಿಕ್ ಟ್ರಾನ್ಸ್ಮಿಟೆಡ್ ಪೋಸ್ಟಲ್ ಬ್ಯಾಲೆಟ್ ಸಿಸ್ಟಮ್ಗಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊಸದಾಗಿ ರಚಿಸಲಾದ ತೆಲಂಗಾಣ ರಾಜ್ಯಕ್ಕೆ 2014 ರಲ್ಲಿ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ಶೇ 25.20 ಮತ್ತು ಬಿಆರ್‌ಎಸ್ (ಆಗ ಟಿಆರ್‌ಎಸ್) ಶೇ 34 ರಷ್ಟು ಮತಗಳನ್ನು ಪಡೆದಿತ್ತು.

2018 ರಲ್ಲಿ ಬಿಆರ್‌ಎಸ್ 119 ಸ್ಥಾನಗಳಲ್ಲಿ 88 ಸ್ಥಾನಗಳನ್ನು ಗೆದ್ದಿತು ಮತ್ತು ಶೇ 47.4 ರಷ್ಟು ಮತ ಹಂಚಿಕೆ ಹೊಂದಿತ್ತು. ಕಾಂಗ್ರೆಸ್ ಕೇವಲ 19 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com