ಕೇರಳ ಸರಣಿ ಸ್ಫೋಟ ಪ್ರಕರಣ; ಸುಧಾರಿತ ಸ್ಫೋಟಕ ಸಾಧನ ಬಳಸಿ ಕೃತ್ಯ: ಕೇರಳ ಡಿಜಿಪಿ

ಕೇರಳ ಪ್ರಾರ್ಥನಾ ಮಂದಿರದಲ್ಲಿ ಸಂಭವಿಸಿದ ಸ್ಫೋಟಕಕ್ಕೆ ‘ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.
ಕೇರಳದ ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್
ಕೇರಳದ ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್
Updated on

ತಿರುವನಂತಪುರಂ: ಕೇರಳ ಪ್ರಾರ್ಥನಾ ಮಂದಿರದಲ್ಲಿ ಸಂಭವಿಸಿದ ಸ್ಫೋಟಕಕ್ಕೆ ‘ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಈ ಕುರಿತು ಕೇರಳದ ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್ ಅವರು ಮಾಹಿತಿ ನೀಡಿದ್ದು, ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಸ್ಫೋಟಕ್ಕೆ ಐಇಡಿ ಬಳಸಿರುವುದಾಗಿ ತಿಳಿದುಬಂದಿದೆ ಎಂದು ಹೇಳಿದ್ದಾರೆ.

‘ಇಂದು ಬೆಳಗ್ಗೆ 9.40ರ ಸುಮಾರಿಗೆ ಕಲಮಸ್ಸೆರಿಯ ಝಮ್ರಾ ಇಂಟರ್‌ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.

ಪ್ರಾಥಮಿಕ ತನಿಖೆಯಲ್ಲಿ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಕೃತ್ಯ ನಡೆಸಿರುವುದು ತಿಳಿದುಬಂದಿದೆ. ಕೆಲವೊಂದು ಅವಶೇಷಗಳು ದೊರಕಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೀಗಾಗಲೇ ಎಲ್ಲಾ ಹಿರಿಯ ಅಧಿಕಾರಿಗಳು ಹಾಗೂ ಹೆಚ್ಚುವರಿ ಡಿಜಿಪಿ ಸ್ಥಳಕ್ಕೆ ಭೇಟಿ ನೀಡಿದ್ದು, ನಾನು ಕೂಡ ಸ್ಥಳಕ್ಕೆ ಇಂದು ಭೇಟಿ ನೀಡಲಿದ್ದೇನೆ’ ಎಂದು ತಿಳಿಸಿದ್ದಾರೆ.

‘ಈ ಘಟನೆ ಗಂಭೀರವಾದುದು. ಹಾಗಾಗಿ, ಎಲ್ಲ ಆಯಮಾಗಳಲ್ಲೂ ತನಿಖೆ ನಡೆಸಲಿದ್ದೇವೆ. ತನಿಖೆಗೆ ಹೊಸ ತಂಡವೊಂದನ್ನು ರಚಿಸಲಾಗಿದೆ. ಇದೇ ವೇಳೆ, ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ, ದ್ವೇಷದ ಸಂದೇಶಗಳನ್ನು ಪೋಸ್ಟ್ ಮಾಡಿದ್ದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಯಾರು ಕೂಡ ಯಾವುದೇ ವದಂತಿಗಳನ್ನು ನಂಬಬೇಡಿ. ಜನರು ಶಾಂತಿ-ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೇರಳದ ಕಲಮಸ್ಸೆರಿಯ ಝಮ್ರಾ ಇಂಟರ್‌ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ 3 ದಿನಗಳ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಇಂದು ಕೊನೆಯ ದಿನವಾಗಿತ್ತು. ಇಂದು(ಭಾನುವಾರ) ಪ್ರಾರ್ಥನಾ ಸಭೆ ಆರಂಭಗೊಳ್ಳುತ್ತಿದ್ದಂತೆಯೇ, ಈ ಸ್ಫೋಟ ಸಂಭವಿಸಿತ್ತು.

ಸ್ಫೋಟದಿಂದಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಮಹಿಳೆಯ ವಿವರ ಇನ್ನೂ ಲಭ್ಯವಾಗಿಲ್ಲ. ಗಾಯಾಳುಗಳನ್ನು ಸರ್ಕಾರಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಸಮಾವೇಶದಲ್ಲಿ 2000 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಬಾಂಬ್ ನಿಷ್ಕ್ರಿಯ ದಳ, ವಿಶೇಷ ತನಿಖಾ ತಂಡ ಹಾಗೂ ಎನ್‌ಐಎ ಅಧಿಕಾರಿಗಳ ತಂಡ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com