ರಾಜಸ್ತಾನ: ಜಾರ್ಖಂಡ್ ಮೂಲದ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 23ನೇ ಪ್ರಕರಣ
ಜಾರ್ಖಂಡ್ ಮೂಲದ 16 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ರಾಜಸ್ಥಾನದ ಕೋಟಾ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದಲ್ಲಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Published: 13th September 2023 03:43 PM | Last Updated: 13th September 2023 08:07 PM | A+A A-

ಪ್ರಾತಿನಿಧಿಕ ಚಿತ್ರ
ಕೋಟಾ: ಜಾರ್ಖಂಡ್ ಮೂಲದ 16 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ರಾಜಸ್ಥಾನದ ಕೋಟಾ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದಲ್ಲಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದ ರಿಚಾ ಸಿನ್ಹಾ ಎಂಬುವವರು ಮಂಗಳವಾರ ತಡರಾತ್ರಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 10.30ರ ಸುಮಾರಿಗೆ ಸಿನ್ಹಾ ಸಾವಿನ ಕುರಿತು ಆಕೆಯನ್ನು ಕರೆದುಕೊಂಡು ಹೋಗಿದ್ದ ಖಾಸಗಿ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ವಿಜ್ಞಾನನಗರ ಪೊಲೀಸ್ ಠಾಣೆಯ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಅಮರ್ ಚಂದ್ ತಿಳಿಸಿದ್ದಾರೆ.
ಇದನ್ನೂ ಓದಿ: ಕೋಟಾ ಆತ್ಮಹತ್ಯೆ: ಪೋಷಕರ ಮೇಲಿನ ಸಾಲದ ಹೊರೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ರಾಜಸ್ಥಾನ ಸಚಿವ
ಜಾರ್ಖಂಡ್‌ನ ರಾಂಚಿ ಮೂಲದ ಸಿನ್ಹಾ ಅವರು 11ನೇ ತರಗತಿ ವಿದ್ಯಾರ್ಥಿನಿಯಾಗಿದ್ದರು ಮತ್ತು ನಗರದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ದಾಖಲಾಗಿದ್ದರು. ಆಕೆ ಈ ವರ್ಷದ ಆರಂಭದಲ್ಲಿ ಕೋಟಾಕ್ಕೆ ಬಂದಿದ್ದರು ಎಂದು ಅವರು ಹೇಳಿದರು.
ಆಕೆಯ ಕೊಠಡಿಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಮತ್ತು ಈ ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಮರ್ ಚಂದ್ ಹೇಳಿದರು.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂಬಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಕೋಟಾದಲ್ಲಿ ಈ ವರ್ಷ ಕೋಚಿಂಗ್ ಇನ್‌ಸ್ಟಿಟ್ಯೂಟ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ 23ನೇ ಪ್ರಕರಣ ಇದಾಗಿದೆ. ಕಳೆದ ವರ್ಷ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 15 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.