ದೀದಿ ಆಡಳಿತದ ಪಶ್ಚಿಮ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ: ಅಮಿತ್‌ ಮಾಳವೀಯ ಟೀಕೆ

ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಪಶ್ಚಿಮ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿದೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಗಂಭೀರ ಆರೋಪ ಮಾಡಿದ್ದಾರೆ.
ಅಮಿತ್‌ ಮಾಳವೀಯ
ಅಮಿತ್‌ ಮಾಳವೀಯ

ನವದೆಹಲಿ: ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಪಶ್ಚಿಮ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿದೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದ ಬಾಂಬರ್‌ ಪಶ್ಚಿಮ ಬಂಗಾಳದಲ್ಲಿ ಬಂಧನಕ್ಕೊಳಗಾಗಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮಮತಾ ವಿರುದ್ಧ ಅಮಿತ್‌ ಮಾಳವಿಯ ಕಿಡಿಕಾರಿದ್ದಾರೆ.

ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೊಲ್ಕತ್ತಾದಲ್ಲಿ ಬಂಧಿಸಲಾಗಿದೆ. ದುರದೃಷ್ಟವಶಾತ್ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಭಯೋತ್ಪಾದಕರಿಗೆ ಪ.ಬಂಗಾಳ ಸುರಕ್ಷಿತ ಸ್ವರ್ಗವಾಗಿದೆ ಎಂದು ಟೀಕಿಸಿದ್ದಾರೆ.

ಅಮಿತ್ ಮಾಳವಿಯ ಟೀಕೆಗೆ ಬಂಗಾಳ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳವು ಎಂದಿಗೂ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿಲ್ಲ. ರಾಜ್ಯ ಪೊಲೀಸರು ತನ್ನ ಜನರನ್ನು ಕೆಟ್ಟ ಚಟುವಟಿಕೆಗಳಿಂದ ಸುರಕ್ಷಿತವಾಗಿರಿಸುವಲ್ಲಿ ಸದಾ ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದಾರೆ. ಅಸತ್ಯವು ಅತ್ಯಂತ ಕೆಟ್ಟದಾಗಿದೆ. ಆರೋಪಿಗಳ ಬಂಧನಕ್ಕೆ ಬಂಗಾಳ ಪೊಲೀಸರೂ ಕೆಲಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಪೊಲೀಸರ ಪ್ರತಿಕ್ರಿಯೆ ಕುರಿತಂತೆ ಕಿಡಿಕಾರಿ ಮತ್ತೊಂದು ಪೋಸ್ಟ್ ಮಾಡಿರುವ ಅಮಿತ್ ಅವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಯಾರು? ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಿದ್ದಾರೆಯೇ ಅಥವಾ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಮರ್ಥಿಸಿಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಪ್ರತಿ ಬಾರಿಯೂ ಅವರಿಂದ ಉತ್ತರ ಬರುವುದಿಲ್ಲ. ಹೀಗೆಯೇ ಅಡಗಿಕೊಳ್ಳುತ್ತಾರೆಂದು ವಾಗ್ದಾಳಿ ನಡೆಸಿದ್ದಾರೆ.

ಮಮತಾ ತಿರುಗೇಟು

ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳ ಜಂಟಿ ಕಾರ್ಯಾಚರಣೆಯಲ್ಲಿ ಪುರ್ಬಾ ಮೇದಿನಿಪುರದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳ ಸುರಕ್ಷಿತವಾಗಿಲ್ಲ ಎಂಬ ಹೇಳಿಕೆಗೆ ಸಿಎಂ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ.

ಕೂಚ್‌ಬೆಹಾರ್‌ನಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಆ ಜನರು ಬಂಗಾಳ ಸುರಕ್ಷಿತವಲ್ಲ ಎಂದು ಹೇಳುತ್ತಾರೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ದೆಹಲಿ ಸುರಕ್ಷಿತವಾಗಿದೆಯೇ? ಅವರು ಏನು ಕೆಲಸ ಮಾಡಿದ್ದಾರೆಂದು ಅವರನ್ನು ಕೇಳಿ ಎಂದು ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com