ಲೋಕಸಭೆ ಚುನಾವಣೆ: 21 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊದಲ ಹಂತದ ಮತದಾನ ಆರಂಭ

ದೇಶದ 102 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಬೆಳಗ್ಗೆ ಆರಂಭವಾಗಿದೆ. 1,600ಕ್ಕೂ ಅಧಿಕ ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆಗಳಲ್ಲಿ ಭದ್ರವಾಗಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.
ಲೋಕಸಭೆಯ ಮೊದಲ ಹಂತದ ಚುನಾವಣೆಗೆ ಮತದಾನ ಮಾಡಲು ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ಕಾಯುತ್ತಿರುವ ಮತದಾರರು.
ಲೋಕಸಭೆಯ ಮೊದಲ ಹಂತದ ಚುನಾವಣೆಗೆ ಮತದಾನ ಮಾಡಲು ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ಕಾಯುತ್ತಿರುವ ಮತದಾರರು.

ನವದೆಹಲಿ: ದೇಶದ 102 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಬೆಳಗ್ಗೆ ಆರಂಭವಾಗಿದೆ. 1,600ಕ್ಕೂ ಅಧಿಕ ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆಗಳಲ್ಲಿ ಭದ್ರವಾಗಲಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಹಾಗೂ ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿ ಸೇರಿದಂತೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ.

8.4 ಕೋಟಿ ಪುರುಷರು ಮತ್ತು 8.23 ​​ಕೋಟಿ ಮಹಿಳೆಯರು ಸೇರಿದಂತೆ 16.63 ಕೋಟಿ ಮತದಾರರು 1.87 ಲಕ್ಷ ಮತಗಟ್ಟೆಗಳಲ್ಲಿ ಇಂದು ಮತದಾನ ಮಾಡಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಆರ್ಟಿಕಲ್ 370 ರದ್ದತಿಯ ಸುಮಾರು ಐದು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದ ಐದು ಸ್ಥಾನಗಳಿಗೆ ಐದು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ. ಮೊದಲ ಹಂತದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಭೂಪೇಂದ್ರ ಯಾದವ್, ಕಿರಣ್ ರಿಜಿಜು, ಸಂಜೀವ್ ಬಲಿಯಾನ್, ಜಿತೇಂದ್ರ ಸಿಂಗ್, ಅರ್ಜುನ್ ರಾಮ್ ಮೇಘವಾಲ್ ಮತ್ತು ಸರ್ಬಾನಂದ ಸೋನೋವಾಲ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಕಾಂಗ್ರೆಸ್‌ನ ಗೌರವ್ ಗೊಗೋಯ್, ಡಿಎಂಕೆಯ ಕನಿಮೊಳಿ ಹಾಗೂ ಬಿಜೆಪಿಯ ತಮಿಳುನಾಡು ಮುಖ್ಯಸ್ಥ ಕೆ ಅಣ್ಣಾಮಲೈ ಕೂಡ ಕಣದಲ್ಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಈ ಬಾರಿಯೂ ಭರ್ಜರಿ ಬಹುಮತ ಪಡೆಯಲು ಪ್ರಯತ್ನಿಸುತ್ತಿದ್ದು, ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ನಿರೀಕ್ಷೆಯಲ್ಲಿದೆ.

ಮುಂಜಾನೆಯೇ ಮತಗಟ್ಟೆಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಮತ ಚಲಾಯಿಸಿದ್ದು, ತಮಿಳುನಾಡಿನ ಎಲ್ಲ 39 ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ಬಿಜೆಪಿ ಅಭ್ಯರ್ಥಿ ಕೆ ಅಣ್ಣಾಮಲೈ, ನಟ ರಜಿನಿಕಾಂತ್ ಕೂಡ ಮತ ಚಲಾಯಿಸಿದ್ದಾರೆ.

18ನೇ ಲೋಕಸಭೆಯ 543 ಸದಸ್ಯರನ್ನು ಆಯ್ಕೆ ಮಾಡುವ ಸಾರ್ವತ್ರಿಕ ಚುನಾವಣೆಯು ಏಳು ಹಂತಗಳಲ್ಲಿ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ನಡೆಯಲಿದೆ. ಫಲಿತಾಂಶವನ್ನು ಜೂನ್ 4 ರಂದು ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com