ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ, ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ

ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ ವಾದ್ರಾ
ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ ವಾದ್ರಾ

ನವದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಮೂಲಗಳ ಪ್ರಕಾರ ಏಪ್ರಿಲ್ 26 ರ ನಂತರ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ನಾಳೆ 2ನೇ ಹಂತದ ಚುನಾವಣೆ ಮುಗಿದ ನಂತರ ಮುಂದಿನ ವಾರ ನಾಮಪತ್ರ ಸಲ್ಲಿಸಬಹುದು ಎನ್ನಲಾಗಿದೆ. ಎರಡನೇ ಹಂತದಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ವಯನಾಡಿನಲ್ಲಿ ಚುನಾವಣೆ ನಡೆಯುತ್ತಿದೆ.

ಇನ್ನು ಅಮೇಥಿಯಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಲು ಅನುಭವಿಸಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೆ ಇರಾನಿ ವಿರುದ್ಧ ಕಣಕ್ಕಿಳಿಯಲಿದ್ದಾರೆ.

ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ; ಅಮೇಥಿ, ವಯನಾಡ್‌ನಿಂದ ರಾಹುಲ್ ಗಾಂಧಿ ಸ್ಪರ್ಧೆ

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಒಪ್ಪಂದದ ಪ್ರಕಾರ, ಚುನಾವಣಾ ನಿರ್ಣಾಯಕ ರಾಜ್ಯದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಮತ್ತು ಸಮಾಜವಾದಿ ಪಕ್ಷ ಉಳಿದ 63 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

ಕಾಂಗ್ರೆಸ್ ತನ್ನ ಸಾಂಪ್ರದಾಯಿಕ ಭದ್ರಕೋಟೆಗಳಾದ ರಾಯ್ ಬರೇಲಿ ಮತ್ತು ಅಮೇಥಿಯ ಹೊರತಾಗಿ ವಾರಣಾಸಿ, ಘಾಜಿಯಾಬಾದ್ ಮತ್ತು ಕಾನ್ಪುರದಲ್ಲೂ ಸ್ಪರ್ಧಿಸುತ್ತಿದೆ.

ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳಿಗೆ ಮೇ 20 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ರಾಯ್ ಬರೇಲಿ 1960 ರಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಫಿರೋಜ್ ಗಾಂಧಿ ಮತ್ತು ಇಂದಿರಾ ಗಾಂಧಿ ಇಬ್ಬರೂ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ನಂತರ 2006 ರಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಕ್ಷೇತ್ರದ ಸಂಸದರಾಗಿದ್ದಾರೆ. ಸೋನಿಯಾ ಗಾಂಧಿ ಅವರು ಇತ್ತೀಚಿಗೆ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಅವರನ್ನು ತಮ್ಮ ತಾಯಿ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ.

ಸೋನಿಯಾ ಗಾಂಧಿ ಅವರು ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕಳೆದ ತಿಂಗಳು ಮತದಾರರಿಗೆ ತಿಳಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಅವರು ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com