ಅಮಿತ್ ಶಾ ವಿಡಿಯೋ ತಿರುಚಿದ ಪ್ರಕರಣ: ದೆಹಲಿ ಪೊಲೀಸರಿಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ತಿರುಚಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಮೇ 1 ರಂದು ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಮೂಲಗಳ ಪ್ರಕಾರ, ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಸೇರಿದಂತೆ ಐವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಎಕ್ಸ್‌ನಲ್ಲಿ ನಕಲಿ ವೀಡಿಯೊವನ್ನು ಪೋಸ್ಟ್ ಮಾಡಲು ಬಳಸಲಾದ ಮೊಬೈಲ್ ಫೋನ್‌ನೊಂದಿಗೆ ಹಾಜರಾಗುವಂತೆ ತೆಲಂಗಾಣ ಸಿಎಂಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗೃಹ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ, ಅಮಿತ್ ಶಾ ಅವರ ತಿರುಚಿದ ವಿಡಿಯೋದ ಬಗ್ಗೆ ದೂರು ದಾಖಲಿಸಿದ ನಂತರ ದೆಹಲಿ ಪೊಲೀಸರ ವಿಶೇಷ ಘಟಕ ಭಾನುವಾರ ಎಫ್‌ಐಆರ್ ದಾಖಲಿಸಿದೆ.
ಇದಕ್ಕೂ ಮುನ್ನ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು, ತೆಲಂಗಾಣ ಕಾಂಗ್ರೆಸ್ ಘಟಕವು ಅಮಿತ್ ಶಾ ಅವರ ತಿರುಚಿದ ವಿಡಿಯೋ ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಿದ್ದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ರದ್ದುಪಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆದ್ದಾರೆ ಎನ್ನಲಾದ ನಕಲಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ