ನವದೆಹಲಿ: ಆಗ್ರಾ– ಲಖನೌ ಎಕ್ಸ್‌ಪ್ರೆಸ್ ವೇ ನಲ್ಲಿ ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ.
ನಾಗಾಲ್ಯಾಂಡ್ ನಂಬರ್ ಪ್ಲೇಟ್ ಹೊಂದಿರುವ ಬಸ್ ರಾಯ್ ಬರೇಲಿಯಿಂದ ದೆಹಲಿಗೆ ತೆರಳುತ್ತಿದ್ದಾಗ ಮಧ್ಯರಾತ್ರಿ 12.45 ರ ಸುಮಾರಿಗೆ ರಾಂಗ್ ಲೇನ್ ನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಸ್‌ನಲ್ಲಿ 60 ಪ್ರಯಾಣಿಕರಿದ್ದರು ಅದರಲ್ಲಿ ನಾಲ್ವರು ಮೃತಪಟ್ಟಿದ್ದು 20–25 ಜನ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಸ್‌ನಲ್ಲಿದ್ದ ಉಳಿದ ಪ್ರಯಾಣಿಕರನ್ನು ಇತರ ವಾಹನ ವ್ಯವಸ್ಥೆ ಮಾಡಿ ಅವರ ಸ್ಥಳಗಳಿಗೆ ಕಳುಹಿಸಲಾಗಿದೆ. ಕಾರು ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದೂ ಅವರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement