ಗುವಾಹಟಿ: ದೇವಾಲಯವೊಂದರ ಬಳಿ ನೆರೆದಿದ್ದವರಿಗೆ ವೇಗವಾಗಿ ಬಂದ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಭಕ್ತರು ಸಾವನ್ನಪ್ಪಿರುವ ಘಟನೆ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟ್ರಕ್ ರಾಜಸ್ಥಾನದ ನೋಂದಣಿ ಸಂಖ್ಯೆ ಹೊಂದಿತ್ತು.
ಪೊಲೀಸರ ಪ್ರಕಾರ, ಪವಿತ್ರ ಶ್ರಾವಣ ಮಾಸದಲ್ಲಿ ಜಿಲ್ಲೆಯ ಮಹಾಮಾಯಾ ದೇವಸ್ಥಾನದ ಬಳಿ 'ಬೋಲ್ ಬೊಮ್ ಯಾತ್ರೆ'ಯಲ್ಲಿ ಭಾಗವಹಿಸಿದ್ದ ಭಕ್ತರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ‘ಜಲಭಿಷೇಕ’ ಮಾಡಲು ಭಕ್ತರು ದೇಗುಲದಲ್ಲಿ ನೆರೆದಿದ್ದರು ಎನ್ನಲಾಗಿದೆ. ದೇಗುಲದ ಮುಂಭಾಗದಲ್ಲಿದ್ದ ನಾಲ್ವರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಅವರೆಲ್ಲರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಕೊಕ್ರಜಾರ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಪುಷ್ಪರಾಜ್ ಸಿಂಗ್ ಹೇಳಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಎಂಬುದು ಗೊತ್ತಿದ್ದರೂ ಜಿಲ್ಲಾಡಳಿತ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ. ಈ ಮಧ್ಯೆ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.
Advertisement