ಕೋಲ್ಕತ್ತಾ: ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.
ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಕುರಿತು ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮತ್ತು ಕೂಡಲೇ ಎಲ್ಲಾ ದಾಖಲೆಗಳನ್ನು ಸಿಬಿಐಗೆ ಹತ್ತಾಂತರಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ ಮುಷ್ಕರ ಕೈಬಿಡುವಂತೆ ವೈದ್ಯರಿಗೆ ಸೂಚಿಸಿದೆ.
ಆರಂಭದಲ್ಲಿ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಮತ್ತು ಅಸಹಜ ಸಾವಿನ ಪ್ರಕರಣ ಏಕೆ ದಾಖಲಿಸಲಾಯಿತು ಎಂದು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರು ಪಶ್ಚಿಮ ಬಂಗಾಳ ಸರ್ಕಾರದ ವಕೀಲರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲರು ತಕ್ಷಣ ಯಾರೂ ಕೊಲೆಗೆ ಸಂಬಂಧಿಸಿದಂತೆ ದೂರು ನೀಡಲಿಲ್ಲ. ಹೀಗಾಗಿ ಅಸಹಜ ಸಾವಿನ ಪ್ರಕರಣ ದಾಖಲಿಸಿದ್ದಾರೆ ಎಂದರು.
31 ವರ್ಷದ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖಾ ಪ್ರಗತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಲ್ಕತ್ತಾ ಹೈಕೋರ್ಟ್, ರಸ್ತೆಬದಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿಲ್ಲ. ಆಸ್ಪತ್ರೆಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಆಸ್ಪತ್ರೆಯ ಅಧೀಕ್ಷಕರು ಅಥವಾ ಪ್ರಾಂಶುಪಾಲರು ದೂರು ಸಲ್ಲಿಸಬಹುದಿತ್ತು ಎಂದಿದೆ.
ಶುಕ್ರವಾರ ಬೆಳಗ್ಗೆ ಆರ್‌ಜಿ ಕಾರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಎಸಗಿ ಕೊಲೆಯಾದ ವೈದ್ಯೆಯ ಶವ ಪತ್ತೆಯಾಗಿದೆ. ಈ ಸಂಬಂಧ ನಾಗರಿಕ ಸ್ವಯಂಸೇವಕನನ್ನು ಶನಿವಾರ ಬಂಧಿಸಲಾಗಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಮೃತ ಸ್ನಾತಕೋತ್ತರ ವಿದ್ಯಾರ್ಥಿನಿಯ ಪೋಷಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
Advertisement