ನವದೆಹಲಿ: ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ಸೂಚಿಸಿರುವುದಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತಿಳಿಸಿದೆ.
ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ವೈದ್ಯೆ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಆಧರಿಸಿ ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
"ಮಾಧ್ಯಮ ವರದಿಗಳ ಪ್ರಕಾರ, ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ". ಒಂದು ವೇಳೆ ಮಾಧ್ಯಮ ವರದಿಯ ವಿಷಯವು ನಿಜವಾಗಿದ್ದರೆ, ಸಂತ್ರಸ್ತೆಯ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆಯನ್ನು ಎತ್ತುತ್ತದೆ ಎಂದು ಆಯೋಗ ಹೇಳಿದೆ.
ಕಳೆದ ಶುಕ್ರವಾರ ಬೆಳಗ್ಗೆ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಘಟನೆ ಖಂಡಿಸಿ ವೈದ್ಯರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
Advertisement