ನವದೆಹಲಿ: ದೇಶದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ಸಹ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್ ಎಂದು ಹೇಳಿದ್ದಾರೆ.
ಈ ನಡುವೆ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಚರಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸತತ 11ನೇ ಬಾರಿಗೆ ದೇಶದ ಜನತೆಯನ್ನುದ್ದೇಶಿಸಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಲಿದ್ದಾರೆ.
ದೆಹಲಿಯ ಕೆಂಪು ಕೋಟೆಯಿಂದ ಪ್ರಧಾನಿ ಮೋದಿ ಅವರು ಭಾರತೀಯ ಧ್ವಜವನ್ನು ಹಾರಿಸಿ, ದೇಶವನ್ನುದ್ದೇಶಿಸಿ ತಮ್ಮ ಸಾಂಪ್ರದಾಯಿಕ ಭಾಷಣವನ್ನು ಮಾಡಲಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಇದು ಅವರ ಮೊದಲ ಸ್ವಾತಂತ್ರ್ಯ ದಿನದ ಭಾಷಣವಾಗಿದೆ.
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಥೀಮ್ ‘ವೀಕ್ಷಿತ್ ಭಾರತ್ @ 2047’ ಆಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಸರ್ಕಾರದ ಪ್ರಯತ್ನಗಳನ್ನು ಈ ಆಚರಣೆಗಳು ಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
ಇಂದಿನ ಸಮಾರಂಭಕ್ಕೆ ಎಲ್ಲ ಸಿದ್ಧತೆಗಳೂ ನಡೆದಿದ್ದು, ಯುವಕರು, ಬುಡಕಟ್ಟು ಸಮುದಾಯಗಳು, ರೈತರು ಮತ್ತು ಮಹಿಳೆಯರು ಹೀಗೆ ವಿವಿಧ ಹಂತಗಳಿಂದ ಸುಮಾರು 6,000 ವಿಶೇಷ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
Advertisement