ಕೊಲ್ಕತ್ತ: ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗೆ ಕಾರಣವಾಗಿರುವ ಪಶ್ಚಿಮ ಬಂಗಾಳದ ಟ್ರೈನಿ ಮಹಿಳಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಚುರುಕುಗೊಳಿಸಿದೆ.
ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸಿಬಿಐ ವಿಶೇಷ ಅಪರಾಧ ವಿಭಾಗವು, ಘಟನೆ ನಡೆದಿದ್ದ ಆರ್ ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನಾಲ್ವರು ವೈದ್ಯರಿಗೆ ಸಮನ್ಸ್ ನೀಡಿದೆ.
ಘಟನೆ ನಡೆದ ರಾತ್ರಿ ಏನಾಯಿತು ಎಂಬುದಕ್ಕೆ ಸಂಬಂಧಿಸಿದಂತೆ ನಾಲ್ವರು ಟ್ರೈನಿ ಡಾಕ್ಟರ್ ಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸಲಿದೆ.
ಆರೋಪಿ ಸಂಜೋಯ್ ರಾಯ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕೋಲ್ಕತ್ತಾದ ಆರ್ ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ಥಾನಿಕ ಮಹಿಳಾ ಡಾಕ್ಟರ್ ಮೇಲಿನ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಕಿರಿಯ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಮಧ್ಯೆ ಆಸ್ಪತ್ರೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 19 ಜನರನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಂಧಿತರನ್ನು ಕೋಲ್ಕತ್ತಾ ನ್ಯಾಯಾಲಯ ಆಗಸ್ಟ್ 22 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಮಧ್ಯರಾತ್ರಿ ನಡೆದ ಪ್ರತಿಭಟನೆಯ ವೇಳೆ ದುಷ್ಕರ್ಮಿಗಳು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಶುಶ್ರೂಷಾ ಕೇಂದ್ರ, ಔಷಧಿ ಅಂಗಡಿ ಮತ್ತು ಆಸ್ಪತ್ರೆಯ ಹೊರರೋಗಿ ವಿಭಾಗದ ಭಾಗಗಳನ್ನು ಧ್ವಂಸಗೊಳಿಸಿದ್ದಾರೆ.
Advertisement