ನವದೆಹಲಿ: ಕೋಲ್ಕತ್ತಾದ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ದೆಹಲಿಯಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ಮನೆ ಮಾಲೀಕನ ಮಗ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ.
ತನ್ನ ಮನೆಯಲ್ಲಿ ಬಾಡಿಗೆದಾರರಾಗಿ ವಾಸಿಸುತ್ತಿದ್ದ ಕುಟುಂಬದ ಬಾಲಕಿ ಮೇಲೆ 22 ವರ್ಷದ ಯುವಕ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮಂಗಳವಾರ ಆರೋಪಿ ಯುವಕ, ಟಿವಿ ವೀಕ್ಷಿಸಲು ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು, ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದಲ್ಲದೆ, ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಘಟನೆ ನಡೆದ ರಾತ್ರಿ ಬಾಲಕಿ ತನ್ನ ಖಾಸಗಿ ಭಾಗಗಳಿಂದ ರಕ್ತಸ್ರಾವವಾದ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ, ಆಕೆ ತಾನು ಅನುಭವಿಸಿದ ಕಷ್ಟವನ್ನು ವಿವರಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಸಂಬಂಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವೃತ್ತಿಯಲ್ಲಿ ಲಾಂಡ್ರಿ ಕಾರ್ಮಿಕರಾಗಿರುವ ಬಾಲಕಿಯ ಪೋಷಕರು ಆರೋಪಿಯ ತಂದೆಯ ಮನೆಯಲ್ಲಿ ಬಾಡಿಗೆದಾರರಾಗಿ ವಾಸಿಸುತ್ತಿದ್ದರು. ಆರೋಪಿ ಪರಾರಿಯಾಗಲು ಸಹಾಯ ಮಾಡಿದ ತಂದೆಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Advertisement