ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿದ್ಯಾರ್ಥಿನಿಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಪೋಸ್ಟ್ ಹಾಕಿರುವ ಆರೋಪ ವಿದ್ಯಾರ್ಥಿನಿಯ ಮೇಲಿದೆ. 'ಕೀರ್ತಿ ಸೋಶಿಯಲ್' ಎಂಬ ಇನ್‌ಸ್ಟಾಗ್ರಾಮ್ ಪುಟದಲ್ಲಿ ವಿದ್ಯಾರ್ಥಿನಿ ಪೋಸ್ಟ್ ಹಾಕಿದ್ದರು.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಕೊಲೆ ಮಾಡುವಂತೆ ಜನರನ್ನು ಪ್ರಚೋದಿಸಿದ ಆರೋಪ ವಿದ್ಯಾರ್ಥಿಯ ಮೇಲಿದೆ. ತಮ್ಮ ಪೋಸ್ಟ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯನ್ನು ಉಲ್ಲೇಖಿಸಿದ ಕೀರ್ತಿ ಶರ್ಮಾ ಮಮತಾ ಬ್ಯಾನರ್ಜಿಯವರನ್ನೂ ಅದೇ ರೀತಿಯಲ್ಲಿ ಕೊಲ್ಲುವ ಬಗ್ಗೆ ಮಾತನಾಡಿದ್ದರು. ಇನ್ನು ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಸಂರಕ್ಷಣೆಗೆ ಆಗ್ರಹಿಸಿ ಆರೋಗ್ಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಟಿಎಂಸಿ ಸಂಸದೆ ಸಾಗರಿಕಾ ಘೋಷ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಕೀರ್ತಿ ಶರ್ಮಾ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡು ಆಕೆಯ ವಿರುದ್ಧ ಕ್ರಮಕೈಗೊಳ್ಳುವಂತೆ ಕೋಲ್ಕತ್ತಾ ಪೊಲೀಸರನ್ನು ಒತ್ತಾಯಿಸಿದ್ದರು. ಇಂದಿರಾ ಗಾಂಧಿಯವರಂತೆ ಮಮತಾ ಬ್ಯಾನರ್ಜಿ ಅವರನ್ನು ಶೂಟ್ ಮಾಡಿ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.
Advertisement