
ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಫಾರ್ಮಾ ಕಂಪನಿಯೊಂದರಲ್ಲಿ ಬುಧವಾರ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 13 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ.
ಅನಕಪಲ್ಲಿ ಜಿಲ್ಲೆಯ ರಾಂಬಿಲ್ಲಿ ಮಂಡಲದ ಅಚ್ಚುತಪುರಂ ಎಸ್‌ಇಜೆಡ್‌ನಲ್ಲಿರುವ ಎಸ್ಸೆಂಟಿಯಾ ಅಡ್ವಾನ್ಸ್‌ಡ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನ ರಿಯಾಕ್ಟರ್ ಸ್ಫೋಟಗೊಂಡಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣ ಅನಕಪಲ್ಲಿ ಮತ್ತು ಅಚ್ಚುತಪುರಂನಲ್ಲಿರುವ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಗಾಯಾಳುಗಳನ್ನು ಎನ್‌ಟಿಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಘಟನೆ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾರ್ಮಿಕ, ಕೈಗಾರಿಕಾ ಸಚಿವ ವಾಸಮಶೆಟ್ಟಿ ಸುಭಾಷ್ ಅವರು, ''ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಸ್ಥಳದಲ್ಲಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ನಡೆಸುತ್ತಿದ್ದಾರೆ ಎಂದರು.
ಕಾರ್ಖಾನೆಯಲ್ಲಿನ ದಟ್ಟ ಹೊಗೆಯಿಂದಾಗಿ, ಇಲ್ಲಿಯವರೆಗೆ 13 ಮಂದಿ ಮೃತಪಟ್ಟಿದ್ದಾರೆ. ಸಾವುನೋವುಗಳ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಸ್ಫೋಟ ಸಂಭವಿಸಿದ ಸಮಯದಲ್ಲಿ ಸ್ಥಳದಲ್ಲಿದ್ದ ಒಟ್ಟು ಎಷ್ಟು ಸಿಬ್ಬಂದಿ ಇದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ತೀವ್ರವಾಗಿ ಗಾಯಗೊಂಡ ವ್ಯಕ್ತಿಗಳಲ್ಲಿ ಒಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕಾರ್ಖಾನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆಯೇ ಅಥವಾ ಅಗ್ನಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಸ್ಫೋಟ ಸಂಭವಿಸಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
Advertisement