
ಕೋಲ್ಕತ್ತಾ: ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಮಧ್ಯೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವಂತೆ ಆಗ್ರಹಿಸಿದ್ದಾರೆ.
ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಇತರರಿಗೆ ಪಾಠವಾಗುವಂತಹ ಶಿಕ್ಷೆ ನೀಡಲು ಕಠಿಣ ಕಾನೂನನ್ನು ಜಾರಿಗೊಳಿಸಬೇಕು ಮತ್ತು ಸಂತ್ರಸ್ತರಿಗೆ ತ್ವರಿತ ನ್ಯಾಯ ಒದಗಿಸಲು ಈ ಪ್ರಕರಣಗಳನ್ನು ಫಾಸ್ಟ್ ಟ್ರಾಕ್ ಕೋರ್ಟ್ ಮೂಲಕ 15 ದಿನದಲ್ಲಿ ವಿಚಾರಣೆ ಮುಗಿಸಬೇಕು ಎಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯ ಮುಖ್ಯ ಸಲಹೆಗಾರ ಅಲಪನ್ ಬಂಡೋಪಾಧ್ಯಾಯ ಅವರು ಪ್ರಧಾನಿಗೆ ಬರೆದ ಪತ್ರವನ್ನು ಓದಿದರು.
ಈ ತಿಂಗಳ ಆರಂಭದಲ್ಲಿ ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಪ್ರತಿದಿನ ಸುಮಾರು 90 ಅತ್ಯಾಚಾರ ಪ್ರಕರಣಗಳು ಸಂಭವಿಸುತ್ತವೆ ಎಂದು ಪಶ್ಚಿಮ ಬಂಗಾಳ ಸಿಎಂ ಹೈಲೈಟ್ ಮಾಡಿದ್ದಾರೆ.
"ಹಲವು ಪ್ರಕರಣಗಳಲ್ಲಿ, ಅತ್ಯಾಚಾರ ಸಂತ್ರಸ್ತರನ್ನು ಹತ್ಯೆ ಮಾಡಲಾಗಿದೆ. ಇದು ದೇಶದ ಆತ್ಮವಿಶ್ವಾಸ, ಧೈರ್ಯವನ್ನೇ ಕುಂದುವಂತೆ ಮಾಡುತ್ತಿದೆ. ಹೀಗಾಗಿ ಈ ಪ್ರಕರಣಗಳಿಗೆ ಅಂತ್ಯ ಹಾಡಿ, ಮಹಿಳೆ ಹಾಗೂ ಮಕ್ಕಳ ಸುರಕ್ಷತೆ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇಂತಹ ಗಂಭೀರ ಮತ್ತು ಸೂಕ್ಷ್ಮವಾದ ಪ್ರಕರಣಗಳನ್ನು ಸಮಗ್ರ ಆಯಾಮಗಳಲ್ಲಿ ನೋಡಬೇಕಿದೆ. ಜೊತೆಗೆ ಅತ್ಯಂತ ಕಠಿಣ ಶಿಕ್ಷೆ ಮೂಲಕ ಘಟನೆಗಳಿಗೆ ಇತಿಶ್ರಿ ಹಾಡಬೇಕಿದೆ. ಇದಕ್ಕಾಗಿ ಫಾಸ್ಟ್ ಟ್ರಾಕ್ ಕೋರ್ಟ್‌ಗಳನ್ನು ಸ್ಥಾಪಿಸಿ 15 ದಿನಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗುವಂತೆ ಆಗಬೇಕು ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
Advertisement