
ಅಮರಾವತಿ: ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಪ್ರತಿಭಟನೆಗಳು ಭುಗಿಲೆದ್ದಿವೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿಯೊಬ್ಬರ ಕಣ್ಣಿಗೆ ಕ್ಯಾಮೆರಾ ಬಿದ್ದಿದೆ. ಇದರ ಬೆನ್ನಲ್ಲೇ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಖಾಸಗಿತನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕ್ಯಾಮರಾದಲ್ಲಿ ದಾಖಲಾಗಿರುವ ಕೆಲ ವಿಡಿಯೋಗಳು ಬಾಲಕರ ಹಾಸ್ಟೆಲ್‌ನಲ್ಲಿ ಹರಿದಾಡುತ್ತಿವೆ ಎನ್ನಲಾಗಿದ್ದು. ನಮಗೆ ನ್ಯಾಯ ಬೇಕು ಎಂಬ ಘೋಷಣೆಗಳನ್ನು ಕೂಗುತ್ತಾ ಕಾಲೇಜಿನಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಹಿಡನ್ ಕ್ಯಾಮೆರಾ ಇಟ್ಟವರು ಮತ್ತು ವೀಡಿಯೊಗಳನ್ನು ಪ್ರಸಾರ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಆರೋಪಿಗಳು 300ಕ್ಕೂ ಹೆಚ್ಚು ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದು, ಅವುಗಳನ್ನು ಹಣಕ್ಕಾಗಿ ಇತರರಿಗೆ ಮಾರಾಟ ಮಾಡಿದ್ದಾರೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಈ ನಡುವೆ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಯಾವುದೇ ಹಿಡನ್ ಕ್ಯಾಮೆರಾಗಳು ಪತ್ತೆಯಾಗಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿಕೊಂಡಿದ್ದು, ಪೊಲೀಸ್ ತನಿಖೆಗೆ ಸಹಕರಿಸುವುದಾಗಿ ತಿಳಿಸಿದೆ. ಅಲ್ಲದೆ, ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಭದ್ರತಾ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
ಏತನ್ಮಧ್ಯೆ ಆರೋಪಿಗಳ ಲ್ಯಾಪ್‌ಟಾಪ್, ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪರಿಶೀಲನೆ ನಡೆಸಿದ್ದಾರೆ.
ಘಟನೆಯ ನಂತರ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ಸಚಿವ ಎನ್ ಲೋಕೇಶ್ ಮತ್ತು ಗೃಹ ಸಚಿವೆ ವಂಗಲಪುಡಿ ಅನಿತಾ ಅವರು ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಎಸ್ಪಿ ಆರ್ ಗಂಗಾಧರ್ ರಾವ್ ಅವರಿಗೆ ಸೂಚನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಚಿವ ಲೋಕೇಶ್ ಅವರು, ಘಟನೆ ಬಗ್ಗೆ ತನಿಖೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಕಾಲೇಜುಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಾಲೇಜು ಕ್ಯಾಂಪಸ್‌ನಲ್ಲಿ ಪರಿಸ್ಥಿತಿಯನ್ನು ಸಹಜ ಸ್ಥಿತಿ ತರುವಂತೆ ಸಚಿವ ಕೊಲ್ಲು ರವೀಂದ್ರ, ಜಿಲ್ಲಾಧಿಕಾರಿ ಮತ್ತು ಎಸ್‌ಪಿಗೆ ಆಂಧ್ರಪ್ರದೇಶ ಸಿಎಂ ಆದೇಶಿಸಿದ್ದಾರೆ.
ಜಿಲ್ಲಾ ಎಸ್ಪಿ ಆರ್ ಗಂಗಾಧರ ರಾವ್ ಅವರು ಮಾತನಾಡಿ, ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಅವರ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳಲ್ಲಿ ಯಾವುದೇ ವಿಡಿಯೋ, ಫೋಟೋಗಳು ಕಂಡುಬಂದಿಲ್ಲ. ಕೆಲ ವಿದ್ಯಾರ್ಥಿಗಳು ವದಂತಿಗಳನ್ನು ಸೃಷ್ಟಿಸಿದ್ದು, ಇದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಯಾವುದೇ ಕ್ಯಾಮೆರಾಗಳು ಪತ್ತೆಯಾಗಿಲ್ಲ. ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಗಳ ಲ್ಯಾಪ್‌ಟಾಪ್‌ಗಳು, ಮೊಬೈಲ್ ಫೋನ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಪರಿಶೀಲಿಸಲಾಗಿದೆ. ವಿದ್ಯಾರ್ಥಿನಿಯರು ಆರೋಪಿಸಿದಂತೆ ಯಾವುದೇ ವಿಡಿಯೋ, ಫೋಟೋ ಪತ್ತೆಯಾಗಿಲ್ಲ. ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಗುಡ್ಲವಲ್ಲೇರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
Advertisement