

ಚಂಡೀಗಢ: ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಬುಧವಾರ ಮೂರು ಗಂಟೆಗಳ 'ರೈಲ್ ರೋಕೋ' ಪ್ರತಿಭಟನೆಯ ಭಾಗವಾಗಿ ಪಂಜಾಬ್‌ನ ಹಲವು ಸ್ಥಳಗಳಲ್ಲಿ ರೈಲುಗಳನ್ನು ತಡೆದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ 'ರೈಲ್ ರೋಕೋ'ಗೆ ಕರೆ ನೀಡಿವೆ.
ಕಿಸಾನ್ ಮಜ್ದೂರ್ ಮೋರ್ಚಾದ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಾತನಾಡಿ, ರೈತರು ಮಧ್ಯಾಹ್ನ 12 ರಿಂದ ಹಲವೆಡೆ ರೈಲು ಹಳಿಗಳ ಮೇಲೆ ಕುಳಿತಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಬ್ಯಾನರ್ ಅಡಿಯಲ್ಲಿ ರೈತರು ಕಳೆದ ಶನಿವಾರ 'ದಿಲ್ಲಿ ಚಲೋ' ಪುನರಾರಂಭಿಸುತ್ತಿದ್ದಂತೆ ಹರಿಯಾಣ ಪೊಲೀಸರು ಅವರ ಮೇಲೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿ ತಡೆದಿದ್ದರು.
ಕಳೆದ ಮೂರು ವಾರಗಳಿಂದ ಪಂಜಾಬ್ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪಂಜಾಬ್ ಮತ್ತು ಹರಿಯಾಣ ನಡುವಿನ ಖಾನೌರಿ ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.