
ಔರೈಯಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಆಕೆಯ ಅಜ್ಜ, ತಂದೆ ಮತ್ತು ಚಿಕ್ಕಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಔರೈಯಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಅಲೋಕ್ ಮಿಶ್ರಾ ಅವರು ಶುಕ್ರವಾರ ಮಹಿಳಾ ಸಂಬಂಧಿಯೊಂದಿಗೆ ಹುಡುಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು, ನಂತರ ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
'ಕಳೆದ ಹಲವು ತಿಂಗಳುಗಳಿಂದ ತನ್ನ ಅಜ್ಜ, ತಂದೆ ಮತ್ತು ಚಿಕ್ಕಪ್ಪ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪ್ರಾಥಮಿಕವಾಗಿ ಆಕೆ ಎರಡು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಎಫ್) (ಸಂಬಂಧಿ ಅಥವಾ ಪೋಷಕರಿಂದ ಅತ್ಯಾಚಾರ), 65 (1) (16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ), 232 (ಸುಳ್ಳು ಸಾಕ್ಷ್ಯವನ್ನು ನೀಡುವಂತೆ ವ್ಯಕ್ತಿಯನ್ನು ಬೆದರಿಸುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದೇ ಅಲ್ಲದೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ಆರೋಪಗಳನ್ನು ದಾಖಲಿಸಲಾಗಿದೆ ಎಂದರು.
ಈ ಸಂಬಂಧ ಕಾನೂನು ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ತಿಳಿಸಿದರು. ಸಂತ್ರಸ್ತೆಯ ವಯಸ್ಸು ಸುಮಾರು 13 ವರ್ಷ ಎಂದು ಪೊಲೀಸರು ತಿಳಿಸಿದ್ದಾರೆ.
Advertisement