ಮಹಾರಾಷ್ಟ್ರ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಉದ್ಧವ್ ಠಾಕ್ರೆ ಆಗ್ರಹ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸುವಂತೆ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಒತ್ತಾಯಿಸಿದ್ದಾರೆ.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸುವಂತೆ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಒತ್ತಾಯಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು.

ಗುರುವಾರ ಸಂಜೆ ದಹಿಸರ್‌ನಲ್ಲಿ ಶಿವಸೇನೆ(ಯುಬಿಟಿ) ಪಕ್ಷದ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆಯನ್ನು ಉಲ್ಲೇಖಿಸಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸಬೇಕೆಂದು ಮಾಜಿ ಸಿಎಂ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ದರೋಡೆಕೋರರನ್ನು ರಕ್ಷಿಸುತ್ತಿದೆ ಎಂದು ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.

ಗುರುವಾರ ಸಂಜೆ ಸ್ಥಳೀಯ ಉದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಅವರು ಫೇಸ್‌ಬುಕ್ ಲೈವ್‌ನಲ್ಲಿ ಶಿವಸೇನಾ(ಯುಬಿಟಿ) ನಾಯಕ ವಿನೋದ್ ಘೋಸಲ್ಕರ್ ಅವರ ಪುತ್ರ ಮಾಜಿ ಕಾರ್ಪೊರೇಟರ್ ಅಭಿಷೇಕ್ ಘೋಸಲ್ಕರ್(40) ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ನಂತರ ನೊರೊನ್ಹಾ ಅವರು ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಫೆಬ್ರವರಿ 2 ರಂದು ಮುಂಬೈ ಸಮೀಪದ ಉಲ್ಲಾಸ್‌ನಗರದ ಪೊಲೀಸ್ ಠಾಣೆಯೊಂದರಲ್ಲಿ ಭೂ ವಿವಾದ ಮತ್ತು ರಾಜಕೀಯ ಪೈಪೋಟಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ(ಬಿಜೆಪಿ) ಶಾಸಕ ಗಣಪತ್ ಗಾಯಕ್‌ವಾಡ್ ಅವರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸ್ಥಳೀಯ ನಾಯಕನ ಮೇಲೆ ಫೆಬ್ರವರಿ 2 ರಂದು ಗುಂಡು ಹಾರಿಸಿದ್ದರು.

ಈ ಮಧ್ಯೆ, ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ತುರ್ತು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಶಿವಸೇನಾ(ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com