ಛತ್ತೀಸ್‌ಗಢ: ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ನಾಲ್ವರು ಕಾರ್ಮಿಕರು ಸಾವು
ದಾಂತೆವಾಡ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಣಿಗಾರಿಕೆಗಾಗಿ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮಕ್ಕೆ(ಎನ್‌ಎಂಡಿಸಿ) ಮಂಜೂರು ಮಾಡಿದ ಕಿರಾಂಡುಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗಣಿ ಪ್ರದೇಶದಲ್ಲಿ ಮಧ್ಯಾಹ್ನ 3 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪ್ಲಾಂಟ್ ಆಡಳಿತ ತಿಳಿಸಿದೆ.
ಈ ಪ್ರದೇಶದಲ್ಲಿ ಗಣಿಗಾರಿಕೆ ಇನ್ನೂ ಪ್ರಾರಂಭವಾಗಿಲ್ಲ. ಆದರೆ ಎನ್‌ಎಂಡಿಸಿಯ ಸ್ಕ್ರೀನಿಂಗ್ ಪ್ಲಾಂಟ್-3 ವಿಸ್ತರಣೆ ಯೋಜನೆಯ ಭಾಗವಾಗಿ ಹದಿನಾಲ್ಕು ಕಾರ್ಮಿಕರು ತಡೆಗೋಡೆ ನಿರ್ಮಾಣದಲ್ಲಿ ತೊಡಗಿದ್ದಾಗ ದುರಂತ ಸಂಭವಿಸಿದೆ ಎಂದು ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಅವರು ಹೇಳಿದ್ದಾರೆ.
ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಆರಂಭದಲ್ಲಿ ಇಬ್ಬರು ಕಾರ್ಮಿಕರ ಶವಗಳನ್ನು ಹೊರತೆಗೆದರು, ಇನ್ನೂ ಎರಡು ಶವಗಳನ್ನು ಸಂಜೆ ತಡವಾಗಿ ಹೊರತೆಗೆಯಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ