ಮುಂಬೈ: ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ.
ಶಾಸಕರನ್ನು ಅನರ್ಹಗೊಳಿಸದ ನಾರ್ವೇಕರ್ ಅವರ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಗಿರೀಶ್ ಕುಲಕರ್ಣಿ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠ, ಮಹಾರಾಷ್ಟ್ರ ಶಾಸಕಾಂಗ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಅರ್ಜಿಗೆ ತಮ್ಮ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ಎಲ್ಲಾ ಪ್ರತಿವಾದಿಗಳಿಗೆ ಸೂಚಿಸಿದೆ.
ವಿಭಾಗೀಯ ಪೀಠ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ.
ಠಾಕ್ರೆ ಬಣದ 14 ಶಾಸಕರ ಅನರ್ಹತೆ ಕೋರಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಜನವರಿ 10 ರಂದು ಸ್ಪೀಕರ್ ನಾರ್ವೇಕರ್ ಅವರು ವಜಾಗೊಳಿಸಿದ್ದು, ಈ ಆದೇಶವನ್ನು ಪ್ರಶ್ನಿಸಿ ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೊಗವಾಲೆ ಅವರು ಅರ್ಜಿ ಸಲ್ಲಿಸಿದ್ದಾರೆ.
ಸ್ಪೀಕರ್ ಆದೇಶ ಕಾನೂನು ಬಾಹಿರ ಎಂದು ಘೋಷಿಸಬೇಕು ಮತ್ತು ಅವರ ಆದೇಶವನ್ನು ರದ್ದುಗೊಳಿಸಿ, ಠಾಕ್ರೆ ಗುಂಪಿನ ಎಲ್ಲಾ 14 ಶಾಸಕರನ್ನು ಅನರ್ಹಗೊಳಿಸುವಂತೆ ಗೋಗಾವಾಲೆ ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.
Advertisement