ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಳೆ ಪ್ರಮಾಣ ವಚನ ಸ್ವೀಕಾರ: ಎಲ್ಲ ಹುದ್ದೆಗಳು ಭರ್ತಿ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಳೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಕೊನೆಗೂ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇದ್ದ ಎಲ್ಲ ನ್ಯಾಯಮೂರ್ತಿಗಳ ಹುದ್ದೆಗಳು ಇದರೊಂದಿಗೆ ಭರ್ತಿಯಾದಂತಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಪಿ ಬಿ ವರಾಳೆ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಪಿ ಬಿ ವರಾಳೆ

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಳೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಕೊನೆಗೂ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇದ್ದ ಎಲ್ಲ ನ್ಯಾಯಮೂರ್ತಿಗಳ ಹುದ್ದೆಗಳು ಇದರೊಂದಿಗೆ ಭರ್ತಿಯಾದಂತಾಗಿದೆ.

ಹೌದು.. ಕರ್ನಾಟಕ ಹೈಕೋರ್ಟ್‌ ನಿಕಟ ಪೂರ್ವ ಮುಖ್ಯ ನ್ಯಾಯಮೂರ್ತಿ ಮತ್ತು ಮತ್ತು ಬಾಂಬೇ ಹೈಕೋರ್ಟ್ ನ ನ್ಯಾಯಮೂರ್ತಿಗಳಾಗಿದ್ದ ಪಿ ಬಿ ವರಾಳೆ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಇಂದು ಬೆಳಿಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಸರ್ವೋಚ್ಚ ನ್ಯಾಯಾಲಯದ ಎಲ್ಲಾ ನ್ಯಾಯಮೂರ್ತಿ ಹುದ್ದೆಗಳು ಭರ್ತಿಯಾದಂತಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಅವರು ನ್ಯಾಯಮೂರ್ತಿ ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇಂದು ನ್ಯಾ. ವರಾಳೆ ಅವರು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರೊಂದಿಗೆ ಪೀಠ ಹಂಚಿಕೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದ 7 ದಿನಗಳಲ್ಲಿ ನ್ಯಾಯಮೂರ್ತಿ ವರಾಳೆ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸ್ರೇರ್ಪಡೆ ಮಾಡಿರುವುದು ಗಮನಾರ್ಹ ಸಂಗತಿಯಾಗಿದೆ. ಸಿಜೆಐ ಡಾ ಚಂದ್ರಚೂಡ್ ಅವರ ನೇತೃತ್ವದ ಎಸ್‌ಸಿಯ ಐದು ಸದಸ್ಯರ ಕೊಲಿಜಿಯಂ ಮತ್ತು ಎಸ್‌ಸಿಯ ಇತರ ನಾಲ್ವರು ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಸೂರ್ಯ ಕಾಂತ್ ಮತ್ತು ಅನಿರುದ್ಧ ಬೋಸ್ ಅವರು ಜನವರಿ 19 ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸಿಜೆ ವರಾಳೆ ಅವರ ನೇಮಕಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. 

ಅಂದಹಾಗೆ ನ್ಯಾ. ವರಾಳೆ ಅವರಿಗೆ ಪದೋನ್ನತಿ ನೀಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು. ಪರಿಶಿಷ್ಟ ಜಾತಿಗೆ ಸೇರಿದ ದೇಶದ ಹೈಕೋರ್ಟ್‌ಗಳಲ್ಲಿನ ಅತಿ ಹಿರಿಯ ನ್ಯಾಯಮೂರ್ತಿ ಅವರಾಗಿದ್ದು ದೇಶದೆಲ್ಲೆಡೆಯ ಹೈಕೋರ್ಟ್‌ಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಮುಖ್ಯ ನ್ಯಾಯಮೂರ್ತಿ ಎನಿಸಿಕೊಂಡಿದ್ದರು.  ಕೇಂದ್ರ ಸರ್ಕಾರ ಜ. 24 ರಂದು ಅವರನ್ನು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ನೀಡಲು ಅಧಿಸೂಚನೆ ಹೊರಡಿಸಿತ್ತು. ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಸಿ.ಟಿ.ರವಿಕುಮಾರ್ ಅವರಾದ ಬಳಿಕ ದಲಿತ ಸಮುದಾಯದಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹುದ್ದಗೇರಿದ ಮೂರನೇ ಹಾಲಿ ನ್ಯಾಯಮೂರ್ತಿ ಅವರಾಗಿದ್ದಾರೆ.

ಜೂನ್, 23, 1962 ರಂದು ಜನಿಸಿದ ನ್ಯಾಯಮೂರ್ತಿ ವರಾಳೆ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿ ಪಡೆದಿದ್ದಾರೆ. ನ್ಯಾಯಮೂರ್ತಿ ವರಾಳೆ ಅವರು ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಕೊಂಡಿದ್ದರು. ಆರಂಭಿಕ ವರ್ಷಗಳಲ್ಲಿ ನ್ಯಾಯವಾದಿ ಎಸ್ ಎನ್ ಲೋಯಾ ಅವರ ಬಳಿ ಪ್ರಾಕ್ಟೀಸ್‌ ಮಾಡಿದ್ದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 2008ರ ಜುಲೈ 18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ವರಾಳೆ ಅವರು ಅಕ್ಟೋಬರ್ 15, 2022ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com