
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಆದರೆ ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಿದ್ದರು. ಗಡಿ ನಿಯಂತ್ರಣ ರೇಖೆಯಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ 6 ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಗೆ ಗುಪ್ತಚರ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಮತ್ತೊಂದೆಡೆ, ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಮತ್ತೊಂದು ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಜಿಲ್ಲೆಯ ಕಸ್ತಿಗಢ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದೆ.
ಇದಕ್ಕೂ ಮುನ್ನ ಜುಲೈ 14ರಂದು ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ್ದು ಮೂವರು ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದರು. ಜುಲೈ 16 ರಂದು, ದೋಡಾ ಜಿಲ್ಲೆಯ ಭಾಟಾ ದೇಸಾ ಪ್ರದೇಶದಲ್ಲಿ ಭಯೋತ್ಪಾದಕರು ಹೊಂಚುದಾಳಿ ನಡೆಸಿದ್ದರು. ಇದರಲ್ಲಿ ನಾಲ್ವರು ಯೋಧರು ಮತ್ತು ಸ್ಥಳೀಯ ಪೋಲೀಸ್ ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದರು.
Advertisement