ಶಿಮ್ಲಾ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದ ಮೂವರು ಪಕ್ಷೇತರ ಶಾಸಕರ ರಾಜೀನಾಮೆಯನ್ನು ಕೊನೆಗೂ ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಸೋಮವಾರ ಅಂಗೀಕರಿಸಿದ್ದಾರೆ.
"ರಾಜೀನಾಮೆಗಳನ್ನು ಅಂಗೀಕರಿಸಲಾಗಿದೆ ಮತ್ತು ಈ ಮೂವರು ಶಾಸಕರು ತಕ್ಷಣದಿಂದ ಜಾರಿಗೆ ಬರುವಂತೆ 14ನೇ ವಿಧಾನಸಭೆಯ ಸದಸ್ಯತ್ವ ಕಳೆದುಕೊಳ್ಳುತ್ತಾರೆ" ಎಂದು ಪಠಾನಿಯಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪಕ್ಷೇತರ ಶಾಸಕರಾದ ಹೋಶಿಯಾರ್ ಸಿಂಗ್(ಡೆಹ್ರಾ), ಆಶಿಶ್ ಶರ್ಮಾ(ಹಮೀರ್‌ಪುರ್) ಮತ್ತು ಕೆ ಎಲ್ ಠಾಕೂರ್(ನಲಗಢ) ಅವರು ಫೆಬ್ರವರಿ 27 ರ ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಬಂಡಾಯ ಶಾಸಕ ಜೊತೆಗೆ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಪರವಾಗಿ ಮತ ಚಲಾಯಿಸಿದ್ದರು.
ಈ ಮೂವರು ಶಾಸಕರು ಮಾರ್ಚ್ 22 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಸ್ಪೀಕರ್ ಅವರ ರಾಜೀನಾಮೆಯನ್ನು ಅಂಗೀಕರಿಸಲಿಲ್ಲ. ಈ ಶಾಸಕರು ಸ್ವಯಂಪ್ರೇರಿತವಾಗಿ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ದೂರು ಸ್ವೀಕರಿಸಿರುವುದಾಗಿ ಸ್ಪೀಕರ್ ಹೇಳಿದ್ದರು.
ಈ ಮೂವರು ಶಾಸಕರು ಮಾರ್ಚ್ 23 ರಂದು ಬಿಜೆಪಿಗೆ ಸೇರ್ಪಡೆಯಾಗಿದ್ದರು ಮತ್ತು ತಮ್ಮ ರಾಜೀನಾಮೆಗಳನ್ನು ಅಂಗೀಕರಿಸಲು ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿ ಹಿಮಾಚಲ ಪ್ರದೇಶ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
ಆದರೆ, ನ್ಯಾಯಾಲಯವು ಈ ನಿಟ್ಟಿನಲ್ಲಿ ಸ್ಪೀಕರ್‌ಗೆ ನಿರ್ದೇಶನ ನೀಡಬಹುದೇ ಎಂಬ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದರಿಂದ, ಪ್ರಕರಣವನ್ನು ಮೂರನೇ ನ್ಯಾಯಾಧೀಶರಿಗೆ ವರ್ಗಾಯಿಸಲಾಯಿತು. ಅದು ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇದೆ.
Advertisement