
ಇಟಾನಗರ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪುನರಾಯ್ಕೆಯಾಗಿರುವ ಪೆಮಾ ಖಂಡು ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.
ಇಂದು ಇಟಾನಗರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಖಂಡು ಅವರನ್ನು ಮತ್ತೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
ಬಿಜೆಪಿಯ ಕೇಂದ್ರ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ತರುಣ್ ಚುಗ್ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಖಂಡು ಅವರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಮುಕ್ತಾಯಗೊಂಡ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪೆಮಾ ಖಂಡು ನೇತೃತ್ವದ ಬಿಜೆಪಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ 46 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ.
Advertisement