
ನವದೆಹಲಿ: ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾಗಿ ವಿ.ಸೋಮಣ್ಣ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಸಚಿವರು, ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಖಾತೆ ನೀಡಿದ ಪ್ರಧಾನಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. "ಕಳೆದ 10 ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕ್ರಿಯಾಶೀಲ ನಾಯಕತ್ವದಲ್ಲಿ ದೇಶವು ಗಮನಾರ್ಹ ಬೆಳವಣಿಗೆ ಕಂಡಿದೆ". ಸರ್ಕಾರದ 3ನೇ ಅವಧಿಯಲ್ಲೂ ಅಭಿವೃದ್ಧಿಯ ವೇಗವನ್ನು ಮುಂದುವರಿಸುವ ದೃಢ ಸಂಕಲ್ಪವನ್ನು ಸಚಿವರು ವ್ಯಕ್ತಪಡಿಸಿದರು.
ಬಳಿಕ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಅಡಿ, ಕಳೆದ 5 ವರ್ಷಗಳಲ್ಲಿ 11 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳು ಪೈಪ್‌ಲೈನ್ ಮೂಲಕ ನೀರು ಪೂರೈಕೆಗೆ ಸೇರ್ಪಡೆ ಆಗಿವೆ. ಪ್ರಸ್ತುತ ಶೇ.76 ಗಿಂತ ಹೆಚ್ಚಿನ ಗ್ರಾಮೀಣ ಕುಟುಂಬಗಳಲ್ಲಿ ಪ್ರತಿ ವ್ಯಕ್ತಿಗೆ 55 ಲೀಟರ್ ಗುಣಮಟ್ಟದ ನೀರು ಒದಗಿಸಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ್) ಅಡಿ, ಭಾರತದ ಶೇ.93ಕ್ಕಿಂತ ಹೆಚ್ಚಿನ ಹಳ್ಳಿಗಳನ್ನು ಬಯಲು ಶೌಚ ಮುಕ್ತ ಮಾಡಲಾಗಿದೆ. 2025 ಮಾರ್ಚ್ ವೇಳೆಗೆ ಎಲ್ಲಾ ಹಳ್ಳಿಗಳನ್ನು ಬಯಲು ಶೌಚ ಮುಕ್ತ ಮಾಡಲು ಶ್ರಮಿಸುತ್ತೇವೆ ಎಂದರು.
ಸೋಮಣ್ಣ ತುಮಕೂರು ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾದ ಲೋಕಸಭಾ ಸಂಸದರಾಗಿದ್ದಾರೆ. ಅವರು ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯ ವಸತಿ ಹಾಗೂ ಮೂಲ ಸೌಕರ್ಯ ಸಚಿವ ಸ್ಥಾನಗಳನ್ನು ಅಲಂಕರಿಸಿದ್ದರು.
Advertisement