
ಡಾರ್ಜಿಲಿಂಗ್: ಸೋಮವಾರ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಕಾಂಚನ ಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಕೋಲ್ಕತ್ತಾದ ಸೀಲ್ದಾಗೆ ತೆರಳುತ್ತಿದ್ದ ಕಾಂಚನ ಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 41 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಗೂಡ್ಸ್ ರೈಲಿನ ಚಾಲಕ ಮತ್ತು ಪ್ಯಾಸೆಂಜರ್ ರೈಲಿನ ಗಾರ್ಡ್ ಸೇರಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಪಶ್ಚಿಮ ಬಂಗಾಳದ ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ ಸಾವಿನ ಸಂಖ್ಯೆ 15 ರಷ್ಟಿರುವುದಾಗಿ ಕೆಲವು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನ್ಯೂ ಜಲ್ಪೈಗುರಿ ನಿಲ್ದಾಣದಿಂದ 30 ಕಿಮೀ ದೂರದಲ್ಲಿರುವ ರಂಗಪಾಣಿ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿನ ಇಂಜಿನ್ ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ನಾಲ್ಕು ಹಿಂಭಾಗದ ಬೋಗಿಗಳು ಹಳಿತಪ್ಪಿದವು ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಪರಿಹಾರ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು ಮತ್ತು ಗಾಯಗೊಂಡವರು ಮತ್ತು ಮೃತರ ಸಂಬಂಧಿಕರಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ವೈಷ್ಣವ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್) ಅಪಘಾತದ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ವೈಷ್ಣವ್ ಹೇಳಿದ್ದಾರೆ.
Advertisement