
ಕೋಲ್ಕತಾ: ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆತಲಾ 2 ಲಕ್ಷ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಘೋಷಣೆ ಮಾಡಿದ್ದಾರೆ.
ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ರೈಲ್ವೆ ಅಪಘಾತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಸಚಿವ ಅಶ್ವಿನಿವೈಷ್ಣವ್ ಅವರು ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದಾರೆಂದು ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್ ಮಾಡಿ, ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಸಾವನ್ನಪ್ಪಿದ ಸುದ್ದಿಯು ತೀವ್ರ ದುಃಖವನ್ನುಂಟುಮಾಡಿದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ, ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿದ ಸಾಗಿದ್ದು, ಈ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ನೈಸರ್ಗಿಕ ವಿಕೋಪ ಪರಿಹಾರ ನಿಧಿ (PMNRF)ಯಿಂದ ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು, ಅಪಘಾದ ನಡೆದಿರುವುದು ದುರದೃಷ್ಟಕರ ಸಂಗತಿ. ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿದೆ. ರೈಲ್ವೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆಂದು ಹೇಳಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ತಾವೂ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಮೇಲ್ನೋಟಕ್ಕೆ, ಗೂಡ್ಸ್ ರೈಲು ಸಿಗ್ನಲ್ ದಾಟಿ ಬಂದಿದ್ದು (ಕೆಂಪು ದೀಪವನ್ನು ನಿರ್ಲಕ್ಷಿಸಿ) ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಅಪಘಾತ ಸಂಂಭವಿಸಿದೆ ಎಂದು ಹೇಳಲಾಗುತ್ತಿದೆ.
ಏನಿದು ಘಟನೆ?
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ 15ಕ್ಕೆ ಏರಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಇಲ್ಲಿಯವರೆಗೆ ದೊರೆತ ಮಾಹಿತಿಯ ಪ್ರಕಾರ, ಗೂಡ್ಸ್ ರೈಲು ಸಿಗ್ನಲ್ ಅನ್ನು ಮೀರಿದ ಪರಿಣಾಮ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಮತ್ತು ಅಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ ಎಂದು ವರದಿಗಳು ತಿಳಿಸಿವೆ. ಜನರು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.
ಸಹಾಯವಾಣಿ ಸಂಖ್ಯೆ ಇಂತಿದೆ:
ಜಿಹೆಚ್'ವೈ ನಿಲ್ದಾಣ
03612731621, 03612731622, 03612731623
ಎಲ್ಎಂ'ಜಿ ಸಹಾಯವಾಣಿ ಸಂಖ್ಯೆ:
03674263958, 03674263831, 03674263120, 03674263126, 03674263858
ಕಾಂಚನಜುಂಗಾ ರೈಲು ಡಿಕ್ಕಿಗೆ ಸಂಬಂಧಿಸಿದಂತೆ ಸೀಲ್ದಾಹ್‌ನಲ್ಲಿರುವ ಸಹಾಯವಾಣಿ ಸಂಖ್ಯೆ:
033-23508794, 033-23833326
ಕತಿಹಾರ್ ಸಹಾಯವಾಣಿ ಸಂಖ್ಯೆ:
09002041952, 9771441956
ಕೆಐಆರ್ ನಿಲ್ದಾಣ ಸಹಾಯವಾಣಿ ಸಂಖ್ಯೆ:
6287801805
Advertisement