
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು ಕಾರ್ಯಾಚರಣೆ ಮುಂದುವರೆದಿದೆ.
ಮೂಲಗಳ ಪ್ರಕಾರ, ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನ ಗೋಹ್ಲಾನ್ ಪ್ರದೇಶದಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಟುವಟಿಕೆಯನ್ನು ಸೇನಾ ಸಿಬ್ಬಂದಿ ಗಮನಿಸಿದ್ದಾರೆ. ಇದನ್ನು ಪ್ರಶ್ನಿಸಿದಾಗ, ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು. ಅದಕ್ಕೆ ಸೇನಾ ಸಿಬ್ಬಂದಿ ಕೂಡ ಪ್ರತ್ಯುತ್ತರ ನೀಡಿದರು.
ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆಯ ವೇಳೆ, ಸೇನಾ ಸಿಬ್ಬಂದಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಇಬ್ಬರು ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಬಿದ್ದಿರುವ ಕಾರಣ ಶನಿವಾರ ಅವರ ಮೃತದೇಹಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ ಎಂದು ಭದ್ರತಾ ಪಡೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶನಿವಾರ ಗಡಿ ನಿಯಂತ್ರಣ ರೇಖೆಯ ಬಳಿ ಬಾಸ್‌ಗ್ರೇನ್ ಗ್ರಾಮದ ಸುತ್ತಲೂ ನುಸುಳುಕೋರರ ಗುಂಪು ಕಾಣಿಸಿಕೊಂಡ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು. ಆಪರೇಷನ್ ಬಜರಂಗ್ ಹೆಸರಲ್ಲಿ ಸೇನೆ ಕಾರ್ಯಾಚರಣೆ ನಡೆಸುತ್ತಿದೆ.
Advertisement