
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಹಲವು ಕೇಂದ್ರ ಸಚಿವರು ಸೇರಿದಂತೆ ಹಲವು ನಾಯಕರು ನೂತನ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
18ನೇ ಲೋಕಸಭೆಯ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಅವರು ಸಭಾನಾಯಕರಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲಿಗರು.
ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದ ಪ್ರಧಾನಿ ಮೋದಿ ಅವರಿಗೆ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ನಾಯಕ ಭರ್ತೃಹರಿ ಮಹತಾಬ್ ಅವರು ಪ್ರಮಾಣ ವಚನ ಬೋಧಿಸಿದರು.
ಮೋದಿ ಅವರು ಜೂನ್ 9 ರಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವು ನಾಯಕರು 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Advertisement