
ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ಜಾಮೀನು ಅರ್ಜಿಗಳ ಕುರಿತು ದೆಹಲಿ ಹೈಕೋರ್ಟ್ ಸೋಮವಾರ ತನ್ನ ಆದೇಶ ಪ್ರಕಟಿಸುವ ಸಾಧ್ಯತೆಯಿದೆ.
ಜಾಮೀನು ಕೋರಿ ಕವಿತಾ ಅವರು ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಮೇ 28 ರಂದು ಆದೇಶ ಕಾಯ್ದಿರಿಸಿದ್ದು, ಜುಲೈ 1 ರಂದು ಮಧ್ಯಾಹ್ನ 2:30 ಕ್ಕೆ ತೀರ್ಪು ನೀಡಲಿದ್ದಾರೆ.
ಸಿಬಿಐನ ಭ್ರಷ್ಟಾಚಾರ ಪ್ರಕರಣ ಹಾಗೂ ಇಡಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮೇ 6 ರಂದು ಕವಿತಾ ಅವರು ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಅಬಕಾರಿ ಪ್ರಕರಣದ 50 ಆರೋಪಿಗಳ ಪೈಕಿ ಕವಿತಾ ಅವರು ಏಕೈಕ ಮಹಿಳೆಯಾಗಿದ್ದು, ಅವರಿಗೆ ಜಾಮೀನು ನೀಡಬೇಕು ಎಂದು ಕವಿತಾ ಪರ ವಕೀಲರು ಮನವಿ ಮಾಡಿದ್ದಾರೆ. ಆದರೆ ಆರೋಪಿ ಮಹಿಳೆ ಹೆಚ್ಚು ಪ್ರಭಾವಿಯಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರುವಷ್ಟು ಶಕ್ತಿಶಾಲಿಯಾಗಿದ್ದಾರೆ ಎಂದು ಹೇಳುವ ಮೂಲಕ ಸಿಬಿಐ ಮತ್ತು ಇಡಿ, ಅವರ ಜಾಮೀನು ಅರ್ಜಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದರು.
Advertisement