ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸೋಮವಾರ ಸಿಎಂ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರೊಂದಿಗೆ "ಅನುಚಿತವಾಗಿ ವರ್ತಿಸಿದ್ದಾರೆ" ಮತ್ತು ಈ ವಿಷಯದಲ್ಲಿ ಪಕ್ಷದ ವರಿಷ್ಠರು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಇದು "ಖಂಡನೀಯ ಘಟನೆ" ಎಂದು ಹೇಳಿದರು.
"ನಿನ್ನೆ, ಸ್ವಾತಿ ಮಲಿವಾಲ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ಹೋಗಿದ್ದರು. ಈ ವೇಳೆ ಡ್ರಾಯಿಂಗ್ ರೂಮಿನಲ್ಲಿ ಸಿಎಂ ಭೇಟಿಗಾಗಿ ಕಾಯುತ್ತಿದ್ದಾಗ ಬಿಭವ್ ಕುಮಾರ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಇದು ಅತ್ಯಂತ ಖಂಡನೀಯ ಘಟನೆ. ಇದು ಕೇಜ್ರಿವಾಲ್ ಅವರ ಗಮನಕ್ಕೆ ಬಂದಿದೆ ಮತ್ತು ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಅವರು ಹೇಳಿದರು.
ಸೋಮವಾರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿದ ಮಲಿವಾಲ್ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವೈಯಕ್ತಿಕ ಸಿಬ್ಬಂದಿಯೊಬ್ಬರು, ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಯಾವುದೇ ಅಧಿಕೃತ ದೂರು ಬಂದಿಲ್ಲ ಎಂದು ಅವರು ಹೇಳಿದ್ದಾರೆ.
Advertisement