
ಮಹಾರಾಷ್ಟ್ರ: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಭದ್ರತಾ ಸಿಬ್ಬಂದಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜ್ಯ ಮೀಸಲು ಪೊಲೀಸ್ ಪಡೆಯ ಜವಾನ್ ಪ್ರಕಾಶ್ ಕಾಪ್ಡೆ (39) ಮೃತ ದುರ್ದೈವಿ. ಸಚಿನ್ ಅವರ ವಿವಿಐಪಿ ಭದ್ರತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಪ್ಡೆ, ಇತ್ತೀಚೆಗಷ್ಟೇ ಕರ್ತವ್ಯಕ್ಕೆ ರಜೆ ಪಡೆದು ಊರಿಗೆ ತೆರಳಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿರುವ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗಿನ ಜಾವ 1:30ಕ್ಕೆ ತನ್ನ ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಕಾಶ್ ಅದಾಗಲೇ ಮೃತಪಟ್ಟಿದ್ದರು. ಪ್ರಕಾಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ತಿಳಿಯಲು ಪ್ರಕಾಶ್ ಅವರ ಪೋಷಕರು, ಪತ್ನಿ, ಮಕ್ಕಳು, ಹತ್ತಿರದ ಸಂಬಂಧಿಕರು ಮತ್ತು ಸ್ನೇಹಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Advertisement