
ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನಿಯಮಿತ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ, ಈ ಸಂಬಂಧ ಗುರುವಾರ ಇಡಿಗೆ ನೋಟಿಸ್ ಜಾರಿ ಮಾಡಿದೆ.
ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಅವರ ಮನವಿಗೆ ಶನಿವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಸೂಚಿಸಿದ್ದಾರೆ.
ಸಾಮಾನ್ಯ ಜಾಮೀನು ಅರ್ಜಿಯನ್ನು ಅನುಮತಿಸದಿದ್ದಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಒಂದು ವಾರದವರೆಗೆ ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಮಾಡಿದ ಮತ್ತೊಂದು ಮನವಿಯ ಬಗ್ಗೆಯೂ ನ್ಯಾಯಾಧೀಶರು ಇಡಿ ಪ್ರತಿಕ್ರಿಯೆ ಕೇಳಿದ್ದಾರೆ.
ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನಿಯಮಿತ ಜಾಮೀನು ಕೋರಿ ದೆಹಲಿ ನ್ಯಾಯಾಲಯಕ್ಕೆ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದಾರೆ.
ಕೇಜ್ರಿವಾಲ್ ಪ್ರಸ್ತುತ ಜೂನ್ 1 ರವರೆಗೆ ಸುಪ್ರೀಂ ಕೋರ್ಟ್ ಮಂಜೂರು ಮಾಡಿದ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ. ಏಳು ಹಂತದ ಚುನಾವಣೆಯ ಕೊನೆಯ ಹಂತದ ಮತದಾನ ಮುಗಿದ ಒಂದು ದಿನದ ನಂತರ ಜೂನ್ 2 ರಂದು ಶರಣಾಗುವಂತೆ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಅಬಕಾರಿ ನೀತಿ 'ಹಗರಣ'ಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿಗೆ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅನುವು ಮಾಡಿಕೊಡಲು ಸುಪ್ರೀಂ ಕೋರ್ಟ್ ಮೇ 10 ರಂದು 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು.
Advertisement