ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಖನ್ಯಾರ್ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನಾಪಡೆ ಎನ್‌ಕೌಂಟರ್ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖನ್ಯಾರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಬಳಿಕ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು, ಎನ್ಕೌಂಟರ್ ಆರಂಭಿಸಿದೆ.
ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರೆದಿದ್ದು, ಈವರೆಗೂ ಯಾವುದೇ ಸಾವು-ನೋವುಗಳಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿಯೂ ಭಯೋತ್ಪಾದಕರ ಚಲನವಲನ ಕುರಿತು ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ. ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿಕುಳಿತಿದ್ದ ಉಗ್ರರು ಅರಣ್ಯ ಪ್ರದೇಶದೊಳಗೆ ನುಗ್ಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
Advertisement