ಡೆಹ್ರಾಡೂನ್: ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 36 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಬಸ್ ನಲ್ಲಿ 61 ಮಂದಿ ಪ್ರಯಾಣಿಸುತ್ತಿದ್ದರು. ಗರ್ವಾಲ್‌ನಿಂದ ಕುಮೌನ್'ಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ 25 ಪ್ರಯಾಣಿಕರಿಗೆ ಗಾಯಗಳಾಗಿವೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿರುವ ರಕ್ಷಣಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಘಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಘಟನೆಯಲ್ಲಿ 36 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು ಎಂದು ವರದಿಗಳು ತಿಳಿಸಿವೆ.
ಈ ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ದಾರಿಹೋಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಬಸ್‌ನಿಂದ ಹೊರ ತೆಗೆಯಲಾಗುತ್ತಿದೆ. ಆ್ಯಂಬುಲೆನ್ಸ್ ಕೂಡ ಸ್ಥಳದಲ್ಲಿದೆ ಎಂದು ತಿಳಿಸಿದ್ದಾರೆ.
ಘಟನಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಜಿಲ್ಲಾಡಳಿತ ಮಂಡಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ಸುದ್ದಿ ಕೇಳಿ ಬಹಳ ನೋವಾಯಿತು. ಗಾಯಾಗಳು ರಕ್ಷಣೆಗೆ ಕಾರ್ಯಾಚರಣೆ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಸ್‌ಡಿಆರ್‌ಎಫ್ ತಂಡ ಗಾಯಾಳುಗಳ ರಕ್ಷಣೆ ಮಾಡುತ್ತಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಏರ್ ಲಿಫ್ಟ್ ಮಾಡವಂತೆಯೂ ಸೂಚಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.1 ಲಕ್ಷ ಪರಿಹಾರ ನೀಡುವಂತೆ ಆರ್'ಟಿಒ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ನ್ಯಾಯಾಂಗ ತನಿಖೆಗೂ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸಂತಾಪ: ಪರಿಹಾರ ಘೋಷಣೆ
ಈ ನಡುವೆ ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳನ್ನು ಸೂಚಿಸುತ್ತೇನೆ. ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣೆಗಾಗಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.
ಅಲ್ಲದೆ, ದುರ್ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಗಳಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
Advertisement