ತಕ್ಷಣವೇ ಮಹಾರಾಷ್ಟ್ರ ಡಿಜಿಪಿ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ: ಕಾರಣ ಇಷ್ಟೇ...
ಮುಂಬೈ: ಮಹಾರಾಷ್ಟ್ರದ ಡಿಜಿಪಿಯನ್ನು ತಕ್ಷಣವೇ ಜಾರಿಗೆ ಬರುವಂತೆ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.
ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು ದೂರು ನೀಡಿದ್ದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಚುನಾವಣಾ ಆಯೋಗ, ಡಿಜಿಪಿ ರಶ್ಮಿ ಶುಕ್ಲಾ ಅವರನ್ನು ವರ್ಗಾವಣೆ ಮಾಡಿ, ಅವರ ನಂತರದ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡುವಂತೆ ಮುಖ್ಯಕಾರ್ಯದರ್ಶಿಗೆ ಸೂಚಿಸಿ ಆದೇಶ ಪ್ರಕಟಿಸಿದೆ.
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು, ಹಿರಿಯ ಐಪಿಎಸ್ ಅಧಿಕಾರಿಯು ಆಡಳಿತ ಮಹಾಯುತಿ ಮೈತ್ರಿ ಪರ ಪಕ್ಷಪಾತದ ಧೋರಣೆ ಹೊಂದಿದ್ದಾರೆ ಮತ್ತು ಅವರು ಉನ್ನತ ಹುದ್ದೆಯಲ್ಲಿದ್ದರೆ ನ್ಯಾಯಯುತ ಚುನಾವಣೆ ಸಾಧ್ಯವಿಲ್ಲ ಎಂದು ಆರೋಪಿಸಿದ್ದವು.
ಮಹಾರಾಷ್ಟ್ರದ ಡಿಜಿಪಿಯಾಗಿ ನೇಮಕಕ್ಕೆ ಸಂಬಂಧಿಸಿದಂತೆ ಮೂರು ಐಪಿಎಸ್ ಅಧಿಕಾರಿಗಳ ಸಮಿತಿಯನ್ನು 05.11.2024 (ಮಧ್ಯಾಹ್ನ 1) ರೊಳಗೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ.
ಸಿಇಸಿ ರಾಜೀವ್ ಕುಮಾರ್ ಅವರು ಈ ಹಿಂದೆ ಪರಿಶೀಲನಾ ಸಭೆಗಳು ಮತ್ತು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಘೋಷಣೆಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಿಷ್ಪಕ್ಷಪಾತ ಮತ್ತು ನ್ಯಾಯಯುತವಾಗಿರುವುದು ಮಾತ್ರವಲ್ಲದೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಪಕ್ಷಾತೀತವಾಗಿ ವರ್ತಿಸುವಂತೆ ಎಚ್ಚರಿಕೆ ನೀಡಿದ್ದರು.