ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ತನ್ನ ನಿರ್ದೇಶನಗಳನ್ನು "ಕಟ್ಟು ನಿಟ್ಟಾಗಿ ಜಾರಿಗೆ ತಂದಿಲ್ಲ" ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ, ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ನ್ಯಾಯಾಲಯದ ಆದೇಶಗಳ ಉಲ್ಲಂಘಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಮೇಲಿನ "ಶಾಶ್ವತ ನಿಷೇಧ" ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ತಯಾರಿಕೆ, ಮಾರಾಟ ಮತ್ತು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವ ಆದೇಶಗಳನ್ನು ಜಾರಿಗೊಳಿಸಲು ಕೈಗೊಂಡ ಕ್ರಮಗಳು ಮತ್ತು ಉಲ್ಲಂಘಿಸುವವರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಸುಪ್ರೀಂ ಕೋರ್ಟ್, ದೆಹಲಿ ಸರ್ಕಾರ ಮತ್ತು ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.
ವಾಯು ಮಾಲಿನ್ಯ ಹೆಚ್ಚಾಗಲು ಕಾರಣ ಏನೂ ಎಂಬುದರ ಬಗ್ಗೆ ದೆಹಲಿ ಸರ್ಕಾರ ತಕ್ಷಣ ಪ್ರತಿಕ್ರಿಯಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಒಂದು ವಾರದಲ್ಲಿ ದೆಹಲಿಯಲ್ಲಿ ಪಟಾಕಿಗಳ ಮಾರಾಟ, ತಯಾರಿಕೆ ಮತ್ತು ಸಿಡಿಸುವುದನ್ನು ನಿಷೇಧಿಸಿರುವ ಪ್ರತಿಯೊಂದು ಆದೇಶಗಳನ್ನು ದಾಖಲೆಯಲ್ಲಿ ನಮ್ಮ ಮುಂದೆ ಇಡಬೇಕು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
"ಉಲ್ಲಂಘಿಸಿದವರ ವಿರುದ್ಧ ಪೊಲೀಸರು ಇಲ್ಲಿಯವರೆಗೆ ತೆಗೆದುಕೊಂಡ ಕ್ರಮಗಳು ಮತ್ತು ನ್ಯಾಯಾಲಯದ ಆದೇಶಗಳನ್ನು ಜಾರಿಗೆ ತರಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ನಾವು ದೆಹಲಿ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡುತ್ತಿದ್ದೇವೆ" ಎಂದು ಪೀಠ ಹೇಳಿದೆ.
Advertisement