ಮಡ್ಡಿಪಾಡು: ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಪೊಲೀಸರು ಬುಧವಾರ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಹೈದರಾಬಾದ್‌ನಲ್ಲಿರುವ ವರ್ಮಾ ಅವರ ಜುಬಿಲಿ ಹಿಲ್ಸ್ ನಿವಾಸಕ್ಕೆ ಇಂದು ಭೇಟಿ ನೀಡಿದ ಪ್ರಕಾಶಂ ಜಿಲ್ಲಾ ಪೊಲೀಸ್ ತಂಡ, ನವೆಂಬರ್ 19 ರಂದು ಮಡ್ಡಿಪಾಡು ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಕರಿಗೆ ಖುದ್ದಾಗಿ ನೋಟಿಸ್ ನೀಡಿದೆ.
ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ವರ್ಮಾ ಅವರಿಗೆ ನೋಟಿಸ್‌ಗಳನ್ನು ನೀಡಿದ್ದೇವೆ ಎಂದು ಪ್ರಕಾಶಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.ಆರ್.ದಾಮೋದರ್ ತಿಳಿಸಿದ್ದಾರೆ. ನೋಟಿಸ್ ಸ್ವೀಕರಿಸಿದ ನಂತರ ವರ್ಮಾ ಅವರು ತನಿಖೆಗೆ ಹಾಜರಾಗುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 11 ರಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ತಿರುಚಿದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ನಿರ್ದೇಶಕರ ವಿರುದ್ಧ ಪ್ರಕಾಶಂ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಡ್ಡಿಪಾಡು ನಿವಾಸಿ ರಾಮಲಿಂಗಂ (45) ಎಂಬುವರು ನೀಡಿದ ದೂರಿನ ಮೇರೆಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವರ್ಮಾ ಮಾಡಿರುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸಮಾಜದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಸದಸ್ಯರ ಸ್ಥಾನಮಾನವನ್ನು ಹಾಳುಮಾಡುತ್ತದೆ ಮತ್ತು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿ ರಾಮಲಿಂಗ ಅವರು ಪ್ರಕರಣ ದಾಖಲಿಸಿದ್ದಾರೆ.
Advertisement