ನವದೆಹಲಿ: ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದಲ್ಲಿ ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನೂತನ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ಮೂಲಗಳ ಪ್ರಕಾರ, ಫಡ್ನವೀಸ್ ರಾಜ್ಯದ ಹೊಸ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ಏಕೆಂದರೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಅವರ ಹೆಸರಿಗೆ ಯಾವುದೇ ಆಕ್ಷೇಪಣೆಯಿಲ್ಲ ಎಂದು ಬಿಜೆಪಿ ನಾಯಕತ್ವಕ್ಕೆ ತಿಳಿಸಿದೆ ಎಂದು ವರದಿಯಾಗಿದೆ. ಆದಾಗ್ಯೂ, ಶಿಂಧೆ ನೇತೃತ್ವದ ಶಿವಸೇನೆಯ ನಿಲುವು ಅಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.
ಫಡ್ನವಿಸ್, ಶಿಂಧೆ ಮತ್ತು ಪವಾರ್ ಇಂದು ಸಂಜೆ ದೆಹಲಿಗೆ ಆಗಮಿಸಿರುವುದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ ಮಹಾರಾಷ್ಟ್ರ ನಾಯಕರನ್ನು ಭೇಟಿ ಮಾಡಬಹುದು ಎನ್ನಲಾಗಿದೆ.
ಆದಾಗ್ಯೂ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಮಗಳ ಮದುವೆಯ ಆರತಕ್ಷತೆಯಲ್ಲಿ ಭಾಗವಹಿಸಲು ಮಹಾರಾಷ್ಟ್ರ ನಾಯಕರು ರಾಜಧಾನಿಯಲ್ಲಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರ ಮುಖ್ಯಮಂತ್ರಿ ನೇಮಕದ ಬಗ್ಗೆ ಚರ್ಚಿಸಲು ಯಾವುದೇ ಅಧಿಕೃತ ಸಭೆಯನ್ನು ನಿಗದಿಪಡಿಸಲಾಗಿಲ್ಲ.ಆದರೆ, ಶಿಂಧೆ ಮಂಗಳವಾರ ರಾಜೀನಾಮೆ ಸಲ್ಲಿಸಿದ ನಂತರ, ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಫಡ್ನವಿಸ್ ಮುಖ್ಯಮಂತ್ರಿಯಾಗಿ ನೇಮಕಗೊಂಡರೆ, ಶಿವಸೇನೆ ಮತ್ತು ಎನ್‌ಸಿಪಿ ಎರಡೂ ಪಕ್ಷಗಳಿಂದ ತಲಾ ಒಬ್ಬರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಗೃಹ ಮತ್ತು ಹಣಕಾಸು ಖಾತೆ ಸೇರಿದಂತೆ ಪ್ರಮುಖ ಖಾತೆಗಳನ್ನು ಮಿತ್ರ ಪಕ್ಷಗಳಾದ ಎನ್ ಸಿಪಿ ಮತ್ತು ಶಿವಸೇನೆ ಹಂಚಲಾಗುತ್ತದೆ ಎನ್ನಲಾಗಿದೆ.
ಫಡ್ನವಿಸ್ ಅವರು ಈ ಹಿಂದೆ 2014 ರಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆಗಿನ ಅವಿಭಜಿತ ಶಿವಸೇನೆಯೊಂದಿಗೆ ಸಮ್ಮಿಶ್ರ ಸರ್ಕಾರದಲ್ಲಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದರು.
Advertisement