ಮುಂಬೈ: ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ರಾಜ್ಯ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ 11 ಜನರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಬಸ್ ನಾಗ್ಪುರದಿಂದ ಗೊಂಡಿಯಾಗೆ ತೆರಳುತ್ತಿತ್ತು ಎನ್ನಲಾಗಿದೆ.
ಭಂಡಾರಾ ಡಿಪೋದಿಂದ ಗೊಂಡಿಯಾಗೆ ತೆರಳುತ್ತಿದ್ದ ಬಸ್ ಗೊಂಡಿಯಾ-ಅರ್ಜುನಿ ರಸ್ತೆಯ ಬಿಂದ್ರವನ ಟೋಲಾ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಗೊಂಡಿಯಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ರೂ. 10 ಲಕ್ಷ ನೆರವು ನೀಡುವಂತೆ ಸಾರಿಗೆ ಆಡಳಿತಕ್ಕೆ ಆದೇಶಿಸಿದ್ದಾರೆ.
ಅಪಘಾತ ಸಂಭವಿಸಿದ ಸ್ಥಳದಿಂದ ಎಂಟು ಮೃತದೇಹಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಸ್ಥಳೀಯ ಆಡಳಿತದಿಂದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ಗಾಯಾಳುಗಳಿಗೆ ತಕ್ಷಣದ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.
ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮೃತರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ನಾಗಪುರಕ್ಕೆ ಸ್ಥಳಾಂತರಿಸುವಂತೆ ಗೊಂಡಿಯಾ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Advertisement