ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಿರುವ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಭಾರೀ ಕುತೂಹಲ ಮೂಡಿದೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ, ಮಹಾರಾಷ್ಟ್ರದ ಮುಂದಿನ ಸಿಎಂ ಎಂದು ಬಿಂಬಿತವಾಗಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ಮೊದಲು ಅಮಿತ್ ಶಾ ನಿವಾಸಕ್ಕೆ ಆಗಮಿಸಿದ ಏಕನಾಥ್ ಶಿಂಧೆಯವರ ಜೊತೆ ನಂತರ ಫಡ್ನವಿಸ್ ಮತ್ತು ಪವಾರ್ ಸೇರಿಕೊಂಡರು.
ಸಭೆಯ ನಂತರ ಮಹಾಯುತಿ ಮೈತ್ರಿಕೂಟವು ಹೊಸ ಮುಖ್ಯಮಂತ್ರಿಯ ಬಗ್ಗೆ ತನ್ನ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆಯಿದೆ. ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಏಕನಾಥ್ ಶಿಂಧೆ, ರಾಜ್ಯದಲ್ಲಿ ಸರ್ಕಾರ ರಚನೆಗೆ ಯಾವುದೇ ಅಡ್ಡಿಯಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದರು.
ಇದಕ್ಕೂ ಮುನ್ನ ದೇವೇಂದ್ರ ಫಡ್ನವೀಸ್, ಎನ್‌ಸಿಪಿ ನಾಯಕ ಸುನಿಲ್ ತಟ್ಕರೆ ಅವರ ನಿವಾಸದಲ್ಲಿ ಅಜಿತ್ ಪವಾರ್ ಅವರೊಂದಿಗೆ ಸಭೆ ನಡೆಸಿದರು. ನವೆಂಬರ್ 23 ರಂದು, ಮಹಾಯುತಿ ಮೈತ್ರಿಕೂಟವು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗಳಿಸುವ ಮೂಲಕ ಪ್ರಚಂಡ ಜಯವನ್ನು ಸಾಧಿಸಿತು.
ಬಿಜೆಪಿ ದಾಖಲೆಯ 132 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಶಿವಸೇನೆ ಮತ್ತು ಎನ್‌ಸಿಪಿ ಕ್ರಮವಾಗಿ 57 ಮತ್ತು 41 ಸ್ಥಾನಗಳನ್ನು ಗೆದ್ದವು. ಫಲಿತಾಂಶದ ಐದು ದಿನಗಳ ನಂತರ, ಮೈತ್ರಿ ಪಾಲುದಾರರು ಇನ್ನೂ ಮುಖ್ಯಮಂತ್ರಿ ಹುದ್ದೆಯ ಬಿಕ್ಕಟ್ಟನ್ನು ಪರಿಹರಿಸಿಲ್ಲ. ಬಿಜೆಪಿಯ ಮೇಲುಗೈ ಸಾಧಿಸಿರುವ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವೀಸ್ ನಾಯಕತ್ವ ವಹಿಸುವ ಸಾಧ್ಯತೆ ಇದೆ ಎಂದು ಊಹಾಪೋಹಗಳು ಹೇಳುತ್ತಿವೆ.
Advertisement