ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ಡಿಸೆಂಬರ್ 5 ರಂದು ರಚನೆಯಾಗಲಿದ್ದು, ದೇವೇಂದ್ರ ಫಡ್ನವಿಸ್ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಶನಿವಾರ ಹೇಳಿದ್ದಾರೆ.
ನವೆಂಬರ್ 20 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷ(ಬಿಜೆಪಿ), ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ)ಯ ಮಹಾಯುತಿ ಮೈತ್ರಿಕೂಟ 288 ವಿಧಾನಸಭಾ ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗಳಿಸುವ ಮೂಲಕ ಮತ್ತೆ ಅಧಿಕಾರಕ್ಕೇರುತ್ತಿದೆ.
ಬಿಜೆಪಿ 132 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಶಿವಸೇನೆ 57 ಮತ್ತು ಎನ್‌ಸಿಪಿ 41 ಸ್ಥಾನಗಳೊಂದಿಗೆ ನಂತರದ ಸ್ಥಾನದಲ್ಲಿವೆ.
ಚುನಾವಣಾ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಮಹಾಯುತಿ ಮೈತ್ರಿಕೂಟದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸಲು ಸಾಧ್ಯವಾಗದ ಕಾರಣ ಹೊಸ ಸರ್ಕಾರ ರಚನೆ ವಿಳಂಬವಾಗುತ್ತಿದೆ.
ಶಿಂಧೆ, ಫಡ್ನವೀಸ್ ಮತ್ತು ಪವಾರ್ ಗುರುವಾರ ತಡರಾತ್ರಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮುಂದಿನ ಸರ್ಕಾರ ರಚನೆ, ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದ್ದಾರೆ.
ಡಿಸೆಂಬರ್ 5 ರಂದು ಹೊಸ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೆಸರು ಹೇಳಲು ಇಚ್ಛಿಸದ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
ಕಳೆದ ಸರ್ಕಾರದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಹೇಳಿದ್ದಾರೆ.
ಆದರೆ ಅದಕ್ಕೂ ಮೊದಲು ಡಿಸೆಂಬರ್ 2 ರಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Advertisement